
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (92) ನಿನ್ನೆ ವಿಧಿವಶರಾಗಿದ್ದು, ಇಂದು ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರು ನಿನ್ನೆ ಬೆಳಿಗ್ಗೆ ಕೊನೆಯುಸಿರೆಳೆದಿದ್ದರು. ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಕೆಫಿ ಡೇ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಂತ್ಯಕ್ರಿಯೆಗೂ ಮುನ್ನ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಎಸ್.ಎಂ.ಕೃಷ್ಣ ಮೊಮ್ಮಗ, ಡಿಸಿಎಂ ಡಿ.ಕೆ.ಶಿವಕುಮಾರ್ ಅಳಿಯ ಅಮರ್ಥ್ಯ ಅಂತಿಮ ವಿಧಿವಿಧಾನಗಳನ್ನು ನೆರೆವೇರಿಸಿದರು. ಡಾ.ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ 15 ಜನ ಪುರೋಹಿತರ ಸಮ್ಮುಖದಲ್ಲಿ ಅಂತಿಮ ವಿಧಿವಿಧನಗಳನ್ನು ಮಾಡಲಾಯಿತು. ಬಳಿಕ ಸರ್ಕಾರಿ ಗೌರವದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಹೆಚ್.ಕೆ.ಪಾಟೀಲ್, ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಹಲವು ಸಚಿವರು, ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಯಕ ಆರ್.ಅಶೋಕ್, ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ಗೌರವ ನಮನ ಸಲ್ಲಿಸಿದರು.
ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದರು. ಬಳಿಕ ಮೂರು ಸುತ್ತು ಕುಷಾಲತೋಪು ಸಿಡಿಸಿದ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಂ.ಕೆ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು. 1000 ಕೆಜಿ ಶ್ರೀಗಂಧದ ಕಟ್ಟಿಗೆಯನ್ನು ಚಿತೆಗೆ ಬಳಸಲಾಯಿತು. ಮಾಜಿ ಸಿಎಂ, ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಪಂಚಭೂತಗಳಲ್ಲಿ ಲೀನರಾದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ