Kannada NewsKarnataka News
ಬಿಜೆಪಿ ಸರ್ಕಾರದ, ಸಚಿವರ ಭ್ರಷ್ಟ ಆಡಳಿತಕ್ಕೆ ಸಂತೋಷ ಜೀವ ಬಲಿ- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಸಚಿವ ಕೆ.ಎಸ್. ಈಶ್ವರಪ್ಪ ಸಂಪುಟದಿಂದ ವಜಾಮಾಡಲು ಒತ್ತಾಯ
ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸರ್ಕಾರ ಶೀಘ್ರ ಸಿಬಿಐಗೆ ಒಪ್ಪಿಸಬೇಕು. ಇದಕ್ಕೆ ಕಾರಣರಾದ ಸಚಿವ ಕೆ.ಎಸ್. ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಆಗ್ರಹಿಸಿದರು.
ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಕೇಸ್ ಖಂಡಿಸಿ, ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಗರದ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಸಿದ್ದರಾಮಯ್ಯ ಆಡಳಿತಾವಧಿಯ ಸರ್ಕಾರವನ್ನು ಯಾವುದೇ ಆಧಾರವಿಲ್ಲದೇ 10% ಕಮಿಷನ್ ತೆಗೆದುಕೊಳ್ಳುವ ಸರ್ಕಾರ ಎಂದು ಆರೋಪಿಸಿದ್ದರು. ಆದರೆ ಇಂದು ಬಿಜೆಪಿ ಸರ್ಕಾರ, ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಗುತ್ತಿಗೆದಾರರು 40% ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿದರೂ ಪ್ರಧಾನಿ ಮೋದಿ ಅವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ ಎಂದು ದೂರಿದರು.
ಗುತ್ತಿಗೆದಾರ ಸಂತೋಷ ಪಾಟೀಲ್ ಅವರ ಪತ್ರಕ್ಕೆ ಪ್ರಧಾನಿ, ರಾಜ್ಯ ಸರ್ಕಾರ ಸ್ಪಂದಿಸಿದ್ದರೆ ಸಂತೋಷ ಅವರ ಜೀವ ಉಳಿಸಬಹುದಿತ್ತು. ಆದರೆ ಬಿಜೆಪಿ ಸರ್ಕಾರದ, ಸಚಿವರ ಭ್ರಷ್ಟ ಆಡಳಿತಕ್ಕೆ ಸಂತೋಷ ಜೀವ ಬಲಿಯಾಗಿದ್ದು, ಅವರ ಕುಟುಂಬ ಅನಾಥವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗುತ್ತಿಗೆದಾರ ಸಂತೋಷ ಪಾಟೀಲ ತನಗೆ ಆದಂತಹ ಅನ್ಯಾಯದ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದರು. ಆದರೆ ಸರ್ಕಾರ ಅವರಿಗೆ ಸ್ಪಂದಿಸಿಲ್ಲ. 40% ಕಮಿಷನ್ ತೆಗೆದುಕೊಳ್ಳುವ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಈ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಡಿ.ಕೆಂಪಯ್ಯ ಅವರು ಆರೋಪಿಸಿದ್ದಾರೆ ಎಂದು ತಿಳಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತ ಸಮೀಪದ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾರ್ಯಕರ್ತರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
ಈಶ್ವರಪ್ಪ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕೂಡಲೇ ಕಠಿಣ ಕ್ರಮ ಜರುಗಿಸಬೇಕು. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್. ಈಶ್ವರಪ್ಪ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ದಹನಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಶಾಸಕ ಅಶೋಕ ಪಟ್ಟಣ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ನಗರ ಅಧ್ಯಕ್ಷ ರಾಜು ಸೇಠ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಮಾಜಿ ಶಾಸಕ ಶ್ಯಾಮ ಘಾಟಗೆ, ಸುನೀಲ್ ಹನಮಣ್ಣವರ್, ಕಾಂಗ್ರೆಸ್ ಮುಖಂಡರಾದ ಮಹಾವೀರ ಮೋಹಿತೆ, ಗಜಾನನ ಮಂಗಸೂಳಿ, ಸುನೀಲ್ ಸಂಕ, ಸದಾಶಿವ ಬೂಟಾಳಿ, ಸಿದ್ದಾರ್ಥ ಸಿಂಗೆ, ಪರುಶುರಾಮ ಢಗೆ, ರಾವಸಾಬ್ ಐಹೊಳೆ, ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಬಿಸಿರೊಟ್ಟಿ ಸೇರಿದಂತೆ ಬೆಳಗಾವಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ