ಪ್ರಗತಿವಾಹಿನಿ ಸುದ್ದಿ: ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಸನ್ನಿಧಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಬಳಿಕ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದರು.
ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕ್ಷೇತ್ರದ ಶಾಸಕರಾದ ವಿಶ್ವಾಸ್ ವ ವೈದ್ಯ ಮತ್ತು ಜಿಲ್ಲೆಯ ಶಾಸಕರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದರು.
ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಬಿಜೆಪಿಯವರು ಭಯಾನಕ ಮಾತಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ದೇವರು, ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸಿ ಎಂದು ಎಲ್ಲೂ ಹೇಳಿಲ್ಲ ಎಂದರು.
ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ ಅಂಗಡಿ ಹಾಕಿಕೊಟ್ಟಿದ್ದಾರೆ, ಟೈಲರಿಂಗ್ ಮೆಷಿನ್ ಕೊಡಿಸಿದ್ದಾರೆ. ಇಂಥವು ನೂರಾರು ಉದಾಹರಣೆಗಳಿವೆ ಎಂದರು.
ತಾಯಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ. ಕ್ಷೇತ್ರದಲ್ಲಿ ಅನಧಿಕೃತವಾಗಿ ಮಳಿಗೆಗಳನ್ನು ಹಾಕಬೇಡಿ. ಅನಧಿಕೃತವಾಗಿ ಇರುವವರಿಗೆ ಬೇರೆ ವ್ಯವಸ್ಥೆ ಮಾಡೋಣ. ಆದರೆ ಅಕ್ರಮವಾಗಿ ಯಾರೂ ಮಳಿಗೆ ಹಾಕದೆ ಸಹಕರಿಸಿ ಎಂದು ಕರೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ