Belagavi NewsBelgaum NewsKannada NewsKarnataka News

ಎಸ್.ಸಿ-ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆ

ಸಮುದಾಯಗಳ ಅಭಿವೃದ್ಧಿಗೆ ಅಧಿಕಾರಿಗಳು ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಿ: ಪಲ್ಲವಿ. ಜಿ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ಎಲ್ಲ ಯೋಜನೆಗಳು ಪಾರದರ್ಶಕವಾಗಿ ಜನರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷತೆ ಪಲ್ಲವಿ.ಜಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಆ.೨೮) ನಡೆದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಅಂಬೇಡ್ಕರ್ ವಸತಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ, ಕುಂದು ಕೊರತೆ ಸೇರಿದಂತೆ ಅಗತ್ಯ ಪ್ರಗತಿ ವರದಿಯ ಮಾಹಿತಿ ಪಡೆದುಕೊಳ್ಳಾಗಿದೆ. ವಸತಿ ಶಾಲೆಗಳಲ್ಲಿ ಸ್ವಚ್ಚತೆ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳಿಗೆ ತೊಂದರೆಯಾಗಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಎಸ್.ಸಿ-ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆ

ಸರ್ಕಾರದ ಮಾರ್ಗಸೂಚಿ ಅನ್ವಯ ಅನುಷ್ಠಾನ ಸಮಿತಿ ರಚನೆ ಮಾಡಬೇಕು. ಒಂದು ವಾರದೊಳಗೆ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚಿಸಿ ಕೂಡಲೇ ಸಮಿತಿ ರಚನೆ ಮಾಡಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅನುಷ್ಠಾನ ಸಮಿತಿ ಸಭೆ ರಚಿಸಿ, ನಿಯಮಾನುಸಾರ ಸದಸ್ಯರ ಆಯ್ಕೆ ಮಾಡಬೇಕು ಎಂದು ಸೂಚಿಸಿದರು.
ಒಂದು ವೇಳೆ ಅನುಷ್ಠಾನ ಸಮಿತಿ ರಚನೆ ವಿಳಂಬವಾದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನೇರವಾಗಿ ಹೊಣೆಯಾಗುತ್ತಾರೆ. ಹಾಗಾಗಿ ಅವಕಾಶ ವಂಚಿತರಿಗೆ ಸೌಲಭ್ಯ ಸಿಗಬೇಕು ಎಂಬುದು ನಿಗಮದ ಉದ್ದೇಶವಾಗಿದೆ ಕೂಡಲೇ ಅಧಿಕಾರಿಗಳು ಸಮಿತಿ ರಚನೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಕಳೆದ ೨ ವರ್ಷಗಳಿಂದ ಸಮುದಾಯಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ತಲುಪಿಸುವ ಯೋಜನೆಗಳ ಗುರಿ ಸಾಧನೆಯಾಗಿಲ್ಲ. ಗಂಗಾಕಲ್ಯಾಣ, ಉದ್ಯಮಶೀಲತೆ ಸೇರಿದಂತೆ ಯಾವುದೇ ಯೋಜನೆಗಳು ಸಮರ್ಪಕ ಅನುಷ್ಠಾನವಾಗಿಲ್ಲ ಎಂದು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಹೇಳಿದರು.

ಅಲೆಮಾರಿ ಸಮುದಾಯಗಳ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಫಲಾನುಭವಿಗಳನ್ನು ಆಯ್ಕೆ ಮಾಡಿ ಅಂಬೇಡ್ಕರ್ ನಿಗಮಕ್ಕೆ ಪಟ್ಟಿ ಸಲ್ಲಿಸುತ್ತಿದೆ. ಕಳೆದ ೨ ತಿಂಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವ ಕಾರಣ ಗಂಗಾಕಲ್ಯಾಣ ಯೋಜನೆ ತಲುಪಿಸಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಮುಂದಿನ ೨ ತಿಂಗಳ ಒಳಗಾಗಿ ಯೋಜನೆಗಳನ್ನು ಜನರಿಗೆ ತಲುಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ ಅವರು ಮಾಹಿತಿ ನೀಡಿದರು.

ಕಳೆದ ೨ ವರ್ಷಗಳಿಂದ ಅನುದಾನ ಬಳಕೆ ಸಮರ್ಪಕವಾಗಿಲ್ಲ. ಅನುದಾನ ಬಳಕೆಯಲ್ಲಿ ವಿನಾಕಾರಣ ನೆಪವೊಡ್ಡದೆ ಕೂಡಲೇ ಬಳಕೆ ಮಾಡಬೇಕು. ಸಮುದಾಯದ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಿ ಅನುದಾನ ಬಳಕೆ ಮಾಡಬೇಕು ಎಂದು ಪಲ್ಲವಿ.ಜಿ ಅವರು ತಿಳಿಸಿದರು.

ಎಲ್ಲಾ ಯೋಜನೆಗಳು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು. ಬ್ಯಾಂಕ್ ನಿಂದ ಸೌಲಭ್ಯಗಳನ್ನು ನೀಡಲು ನಿರಾಕರಿಸಿದರೆ ಅಧಿಕಾರಿಗಳು ನೇರವಾಗಿ ಲೀಡ್ ಬ್ಯಾಂಕ್ ಅಧಿಕಾರಿಗಳೊಡನೆ ಅಥವಾ ಜಿಲ್ಲಾಧಿಕಾರಿಗಳ ಜೊತೆಗೆ ಬ್ಯಾಂಕರ್ಸ್ ಸಭೆ ಕರೆದು ಅಂತಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸಲು ಸೂಚನೆ ನೀಡಬೇಕು ಎಂದು ತಿಳಿಸಿದರು.

ಎಸ್. ಸಿ, ಎಸ್.ಟಿ ಶಿಕ್ಷಣ ವಸತಿ ನಿಲಯಗಳಲ್ಲಿ ಶೇಕಡಾ ೧೦% ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ಸರ್ಕಾರದಿಂದ ನಿರ್ದೇಶನವಿದೆ. ಅದೇ ರೀತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಸತಿ ನಿಲಯಗಳಲ್ಲಿ ಶೇಕಡಾ ೧೦% ರಷ್ಟು ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಪಲ್ಲವಿ.ಜಿ ಅವರು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ರಾಹುಲ್ ಕಾಂಬಳೆ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಮುಖಂಡರು, ಸದಸ್ಯರು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button