ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹಿರೇಬಾಗೆವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ ೦೪ ರಿಂದ ಡಿ.೧೫ ೨೦೨೩ ವರೆಗೆ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತತೆ ಕಾಪಾಡುವ ಹಿತದೃಷ್ಟಿಯಿಂದ ಸುವರ್ಣಸೌಧದ ಪೂರ್ವ ಕಡೆಗೆ ಶೆಗನಮಟ್ಟಿ ಜಮೀನ ೫೦೦ ಮೀಟರ್ ಅಂತರ, ಉತ್ತರಕ್ಕೆ ಸುವರ್ಣ ಗಾರ್ಡನ್ ಕಲ್ಯಾಣ ಮಂಟಪದವರೆಗೆ ೫೦೦ ಮೀಟರ್ ಹಾಗೂ ಪಶ್ಚಿಮಕ್ಕೆ ರಾಷ್ಟ್ರೀಯ ಹೆದ್ದಾರಿಯ ಆಚೆಗೆ ಇರುವ ಸಂಪೂರ್ಣ ಗಾರ್ಡನ್ ಹೊಟೇಲ್ ವರೆಗೆ ೫೦೦ ಮೀಟರ್ ಅಂತರ ಮತ್ತು ದಕ್ಷಿಣ ದಿಕ್ಕಿನ ಕಡೆಗೆ ಟೋಯೋಟಾ ಶೋರೂಮ್ ವರೆಗೆ ೫೦೦ ಮೀಟರ್ ಅಂತರದಲ್ಲಿ ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು ೫೦೦ ಮೀಟರ್ ಸುತ್ತಳತೆಯಲ್ಲಿ ಡಿ.೦೧ ರಿಂದ ಡಿ.೩೦, ೨೦೨೩ ರವರೆಗೆ ಸಿಆರ್‌ಪಿಸಿ ೧೪೪ ರಡಿ ನಿಷೇಧಾಜ್ಞೆ ಹೊರಡಿಸಲಾಗಿದೆ.
ಬೆಳಗಾವಿ ನಗರದ ಸುವರ್ಣ ಸೌಧದ ಎಡಬದಿಯಿಂದ ಟೋಯಟಾ ಶೋರೂಮ್ ವರೆಗೆ ಮತ್ತು ಸುವರ್ಣ ಸೌಧದ ಬಲಬದಿಯಿಂದ ಹಲಗಾ ಗ್ರಾಮದವರೆಗೆ ಅದರಂತೆ ಎದುರುಗಡೆ ಜೀನಗೌಡಾ ಆಸ್ಪತ್ರೆವರೆಗೆ ೫೦೦ ಮೀಟರ್ ವ್ಯಾಪ್ತಿಯಲ್ಲಿ ೦೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.
ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಕಲ್ಲುಗಳನ್ನು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ಪ್ರತಿಬಂಧಿಸಲಾಗಿದೆ.
ಸುವರ್ಣ ಸೌಧದ ಸುತ್ತಮುತ್ತಲಿನ ೫೦೦ ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ.
ಯಾವುದೇ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಬೇಕು.
ರಾಷ್ಟ್ರೀಯ ಹೆದ್ದಾರಿ-೦೪ರಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡುವದು, ರಾಷ್ಟ್ರೀಯ ಹೆದ್ದಾರಿಯ ಸಂಚಾರಕ್ಕೆ ತಡೆ ಒಡ್ಡಿ ಹೆದ್ದಾರಿಯಲ್ಲಿ ಒಡಾಡುತ್ತಿರುವ ಅವಶ್ಯಕ ರೋಗಿಗಳನ್ನು ಸಾಗಿಸುವ ಅಂಬುಲೆನ್ಸ್ ಹಾಗೂ ಇತರೆ ಅವಶ್ಯಕ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ತಡೆದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವದು.
ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಪ್ರಕ್ರೀಯೆ ಸಂಹಿತೆಯ ಕಲಂ ೧೮೮ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳಾದ ಎಸ್. ಎನ್. ಸಿದ್ದರಾಮಪ್ಪಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ