Kannada NewsKarnataka NewsLatestPolitics

*ಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು*: *ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆ ಸೋಂಕಿನ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. 98 ವರ್ಷದ ಅಡ್ವಾಣಿ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.

ಶುಕ್ರವಾರ ರಾತ್ರಿ ಸುಮಾರು 7.30ರ ವೇಳೆಗೆ ಅಡ್ವಾಣಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ. ಎದೆ ಸೋಂಕಿನ ಹಿನ್ನೆಲೆಯಲ್ಲಿ ಶ್ವಾಸಕೋಶ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದೆ. ಈ ಹಿಂದೆ 2026ರ ಮೇ ತಿಂಗಳಲ್ಲೂ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಇದೇ ಆಸ್ಪತ್ರೆಗೆ ದಾಖಲಾಗಿದ್ದ ಅಡ್ವಾಣಿ, ಕೆಲವು ದಿನಗಳ ಚಿಕಿತ್ಸೆಯ ಬಳಿಕ ಬಿಡುಗಡೆಯಾಗಿದ್ದರು.

ಇತ್ತೀಚೆಗೆ, ಅಂದರೆ ಅಕ್ಟೋಬರ್ 7ರಂದು ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿರುವ ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಗುಜರಾತ್ ಮುಖ್ಯಮಂತ್ರಿಯಾಗಿ 2001ರ ಅಕ್ಟೋಬರ್ 7ರಂದು ಮೊದಲ ಬಾರಿಗೆ ಅಧಿಕಾರ ಸ್ವೀಕರಿಸಿದ್ದ ಮೋದಿ, ಸರ್ಕಾರದ ಮುಖ್ಯಸ್ಥರಾಗಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಈ ಭೇಟಿ ನೀಡಿದ್ದರು. ಬಳಿಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಮೋದಿ, ಅಡ್ವಾಣಿ ಅವರ ದಶಕಗಳ ಸಾರ್ವಜನಿಕ ಸೇವೆ ಮತ್ತು ದೇಶದ ಪ್ರಗತಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿದ್ದರು.

ಭಾರತೀಯ ರಾಜಕೀಯದಲ್ಲಿ ಹಲವು ದಶಕಗಳಿಂದ ಪ್ರಮುಖ ಪಾತ್ರ ವಹಿಸಿರುವ ಅಡ್ವಾಣಿ, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ 1999ರಿಂದ 2004ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2002ರಿಂದ 2004ರವರೆಗೆ ಭಾರತದ ಉಪಪ್ರಧಾನಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಮೂರು ಅವಧಿಗಳಲ್ಲಿ ಪಕ್ಷವನ್ನು ಮುನ್ನಡೆಸಿದ್ದ ಅಡ್ವಾಣಿ, ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

1927ರ ನವೆಂಬರ್ 8ರಂದು ಇಂದಿನ ಪಾಕಿಸ್ತಾನದ ಕರಾಚಿಯಲ್ಲಿ ಜನಿಸಿದ ಅಡ್ವಾಣಿ, 1942ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸ್ವಯಂಸೇವಕರಾಗಿ ಸೇರಿದ್ದರು. ಬಳಿಕ ಭಾರತೀಯ ಜನಸಂಘದ ಮೂಲಕ ರಾಜಕೀಯ ಜೀವನ ಆರಂಭಿಸಿ, 1980ರಲ್ಲಿ ಬಿಜೆಪಿ ಸ್ಥಾಪನೆಯಾದ ನಂತರ ಪಕ್ಷದ ಪ್ರಮುಖ ನಾಯಕರಾಗಿ ಹೊರಹೊಮ್ಮಿದ್ದರು. 1986–1990, 1993–1998 ಮತ್ತು 2004–2005ರ ಅವಧಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.

ದೇಶಕ್ಕೆ ಸಲ್ಲಿಸಿದ ಸೇವೆ ಮತ್ತು ಸಾರ್ವಜನಿಕ ಜೀವನದ ಕೊಡುಗೆಗಳನ್ನು ಗುರುತಿಸಿ, 2024ರ ಮಾರ್ಚ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಭಾರತ ರತ್ನ’ ಪ್ರಶಸ್ತಿ ಪ್ರದಾನ ಮಾಡಿದ್ದರು. ಸದ್ಯ ಅಡ್ವಾಣಿ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button