Karnataka NewsPolitics

*ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಯೋಜನೆಗೆ ಕ್ರಮ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ

ಪ್ರಗತಿವಾಹಿನಿ ಸುದ್ದಿ: ಹಿರಿಯ ನಾಗರಿಕರಿಗೆ ಗೌರವ ಮತ್ತು ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಹಿರಿಯರಿಗಾಗಿ ಅರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.
ರಾಜ್ಯ ಸರ್ಕಾರ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ, ಅವರ ಅಭ್ಯುದಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಹಿರಿಯ ನಾಗರಿಕರ ಮಾಸಾಶನ ಹೆಚ್ಚಳ ಮಾಡುವ ಬಗ್ಗೆ ಬೇಡಿಕೆ ಇದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ʼಗ್ಯಾರಂಟಿʼ ಯಿಂದ ಹಿರಿಯರಿಗೆ ಅನುಕೂಲ
ನಮ್ಮ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಗ್ಯಾರಂಟಿ ಯೋಜನೆಗಳಿಂದ ಹಿರಿಯ ನಾಗರಿಕರಿಗೆ ಬಹಳಷ್ಟು ಅನುಕೂಲವಾಗುತ್ತಿದೆ. ಶಕ್ತಿ ಯೋಜನೆಯಡಿ ನಮ್ಮ ಹಿರಿಯ ತಾಯಿಂದಿರರು ಕೂಡ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ, ಇದು ಸಂತಸದ ಸಂಗತಿ ಆಗಿದೆ ಎಂದರು.

ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗೆ 10. 47 ಕೋಟಿ ರೂ.
ರಾಜ್ಯದಲ್ಲಿ ಸದ್ಯ 57 ಲಕ್ಷದ 91 ಸಾವಿರ ಹಿರಿಯ ನಾಗರಿಕರಿದ್ದಾರೆ. ಇಲಾಖೆಗೆ 2024 -25ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಸರ್ಕಾರ 10 ಕೋಟಿ 47 ಲಕ್ಷ ರೂಪಾಯಿ ಅನುದಾನ ನಿಗದಿಪಡಿಸಿದೆ. ಈ ಮೂಲಕ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಅಶಕ್ತ ಮತ್ತು ನಿರ್ಗತಿಕ ಹಿರಿಯ ನಾಗರಿಕರಿಗಾಗಿ ಸ್ವಯಂಸೇವಾ ಸಂಸ್ಥೆಗಳ ಮೂಲಕ ರಾಜ್ಯದೆಲ್ಲೆಡೆ 63 ವೃದ್ಧಾಶ್ರಮಗಳನ್ನು ತೆರೆದಿದೆ. ಸದ್ಯ 1 ಸಾವಿರದ 575 ಮಂದಿ ಅಶಕ್ತ ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಕೇಂದ್ರ ಸರ್ಕಾರದಿಂದಲೂ ನಡೆಸುತ್ತಿರುವ ವೃದ್ಧಾಶ್ರಯಗಳಲ್ಲೂ ಹಿರಿಯ ನಾಗರಿಕರಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಸಚಿವರು ತಿಳಿಸಿದರು.

ಸಹಾಯವಾಣಿ ಸಿಬ್ಬಂದಿಗೆ ಗೌರವ ಧನ ಹೆಚ್ಚಳ

ಹಿರಿಯ ನಾಗರಿಕರಿಗಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸಹಾಯವಾಣಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ ಸಿಬ್ಬಂದಿಗೆ ಶೇ.50ರಷ್ಟು ಗೌರವ ಧನ ಹೆಚ್ಚಿಸಲಾಗಿದೆ ಎಂದು ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಹಿರಿಯರು ಅಶಕ್ತರಲ್ಲ; ಸಶಕ್ತರು
ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ; ಸಶಕ್ತರು. ಹಿರಿಯರನ್ನು ಗೌರವಿಸುವುದು; ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಿರಿಯರ ಬಗ್ಗೆ ಸಾಮಾಜಿಕ ಕಳಕಳಿ ಅತ್ಯಾವಶ್ಯಕ. ಯುವ ಜನಾಂಗಕ್ಕೆ ಹಿರಿಯರ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ಅತ್ಯಗತ್ಯ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮುಖ್ಯಮಂತ್ರಿಯವರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ನಾಗರಿಕರನ್ನು ಸನ್ಮಾನಿಸಿದರು. ಇದೇ ವೇಳೆ ಅವರು, ಇಲಾಖೆಯ ಪೌಷ್ಟಿಕ ಆಹಾರ ಕಿಟ್ ಸೇರಿದಂತೆ ವಿವಿಧ ಸವಲತ್ತುಗಳನ್ನು ಹಿರಿಯ ನಾಗರಿಕರಿಗೆ ವಿತರಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಇಲಾಖಾ ಕಾರ್ಯದರ್ಶಿಗಳಾದ ಡಾ. ಶಮ್ಲಾ ಇಕ್ಬಾಲ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಟಿ. ರಾಘವೇಂದ್ರ, ವಿಕಲಚೇತನರ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ, ಖ್ಯಾತ ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button