
ಪ್ರಗತಿವಾಹಿನಿ ಸುದ್ದಿ: ವಾಣಿಜ್ಯ ಮಳಿಗೆಯೊಂದರಲ್ಲಿ ಸಿಲಿಂಡರ್ಗಳು ಸತತವಾಗಿ ಸ್ಫೋಟಗೊಂಡು ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಮ್ಮಗೊಂಡನಹಳ್ಳಿಯಲ್ಲಿ ನಡೆದಿದೆ.
ಬೆಂಕಿಯ ಕೆನ್ನಾಲಿಗೆ ಹಾಗೂ ದಟ್ಟ ಹೊಗೆಯಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಳಿಗೆಯಲ್ಲಿ ಸಂಗ್ರಹಿಸಿಡಲಾಗಿದ್ದ ಆರು ಕೆಜಿ ತೂಕದ ಒಟ್ಟು 23 ಸಿಲಿಂಡರ್ಗಳು ಒಂದರ ನಂತರ ಒಂದರಂತೆ ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಪ್ರದೇಶ ಹೊಗೆಯಿಂದ ಆವೃತವಾಗಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಮಳಿಗೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ಗಳ ಜತೆಗೆ ಪೆಟ್ರೋಲ್, ಡೀಸೆಲ್ ಹಾಗೂ ಸೀಮೆಎಣ್ಣೆಯಂತಹ ದಹನಕಾರಿ ವಸ್ತುಗಳನ್ನು ಕೂಡ ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಇಂಧನಗಳ ಸಂಗ್ರಹವೇ ಬೆಂಕಿ ವೇಗವಾಗಿ ಹರಡಲು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು. ಸತತ ಪ್ರಯತ್ನದ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.
ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಿಲಿಂಡರ್ಗಳು ಸ್ಫೋಟಗೊಳ್ಳಲು ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಳಿಗೆಯಲ್ಲಿ ದಹನಕಾರಿ ವಸ್ತುಗಳನ್ನು ನಿಯಮಾನುಸಾರ ಸಂಗ್ರಹಿಸಲಾಗಿತ್ತೇ ಅಥವಾ ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ


