Belagavi NewsBelgaum NewsKannada NewsKarnataka News

ಅಧಿವೇಶನ ಪೂರ್ವಸಿದ್ಧತೆ ಸಭೆ: ಅನಧಿಕೃತ ಜಾಹೀರಾತು ಫಲಕ ತೆರವಿಗೆ ಕಟ್ಟುನಿಟ್ಟಿನ ಸೂಚನೆ

———————————-

ಕಾಲಮಿತಿಯಲ್ಲಿ ಸಿದ್ಧತೆ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮುಂಬರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂದರ್ಭದಲ್ಲಿ ವಸತಿ, ಊಟೋಪಹಾರ, ಸಾರಿಗೆ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಪ್ರತಿಯೊಂದು ಸಿದ್ಧತೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು‌ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ನ.20) ನಡೆದ ಅಧಿವೇಶನ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿವೇಶನ ವೇಳೆ ಸಚಿವರು, ಗಣ್ಯರು, ಉನ್ನತಮಟ್ಟದ ಅಧಿಕಾರಿಗಳು ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಇದಲ್ಲದೇ ಸುವರ್ಣ ವಿಧಾನಸೌಧ ಬಳಿ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿವೆ. ಆದ್ದರಿಂದ ಪ್ರತಿವರ್ಷದಂತೆ ಪ್ರತಿಭಟ‌ನಾ ಸ್ಥಳಗಳಲ್ಲಿ ಕುಡಿಯುವ ನೀರು ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.

ಅಂತರ್ಜಾಲ ಸಂಪರ್ಕ, ವಿದ್ಯುತ್ ಸಂಪರ್ಕ, ಶಾಮಿಯಾನಾ, ಬ್ಯಾರಿಕೇಡ್, ಪಾರ್ಕಿಂಗ್ ಮತ್ತಿತರ ವ್ಯವಸ್ಥೆಗಳು ಸಮರ್ಪಕವಾಗಿರಬೇಕು. ಸಂಬಂಧಿಸಿದ ಸಮಿತಿಯ ಅಧಿಕಾರಿಗಳು ಮುಂಚಿತವಾಗಿಯೇ ಪ್ರತಿಯೊಂದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಅನಧಿಕೃತ ಜಾಹೀರಾತು ಫಲಕ ತೆರವುಗೊಳಿಸಲು ಸೂಚನೆ:

ಬೆಳಗಾವಿ ನಗರದ ಪ್ರಮುಖ ವೃತ್ತಗಳು ಮತ್ತು ರಸ್ತೆಗಳಲ್ಲಿರುವ ವಿದ್ಯುತ್ ಕಂಬಗಳು, ಮರ-ಗಿಡಗಳು, ಗೋಡೆಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ಹಾಕಲಾಗಿರುತ್ತದೆ. ಅಂತಹ ಅನಧಿಕೃತ ಜಾಹೀರಾತು ಫಲಕಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದಲ್ಲಿ ಅನೇಕ ಕಡೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಗೋಡೆ, ಮರಗಳ ಮೇಲೆ ಕೋಚಿಂಗ್ ಸೆಂಟರ್, ಖಾಸಗಿ ಮಳಿಗೆಗಳು, ವಾಣಿಜ್ಯ ವಹಿವಾಟುಗಳಿಗೆ ಸಂಬಂಧಿಸಿದಂತಹ ಜಾಹೀರಾತುಗಳನ್ನು ಹಾಕಲಾಗಿರುತ್ತದೆ.

ಇದರಿಂದ ವಿದ್ಯುತ್ ತಂತಿ ಹರಿದು ಅನಾಹುತವಾಗುವ ಸಾಧ್ಯತೆಗಳಿವೆ. ಆದ್ದರಿಂದ ಅನಧಿಕೃತ‌ ಜಾಹೀರಾತುಗಳನ್ನು ಹಾಕುವ ಕಂಪನಿ ಅಥವಾ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಪೊಲೀಸ್ ಆಯುಕ್ತರಾದ ಎಸ್.ಎನ್. ಸಿದ್ದರಾಮಪ್ಪ ಅವರು ಮಾತನಾಡಿ, ಭದ್ರತೆ ದೃಷ್ಟಿಯಿಂದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿದ್ದು, ಅವರಿಗೆ ಸಮರ್ಪಕ ವಸತಿ ಹಾಗೂ ಊಟೋಪಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ, ಅಪರ ಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button