Kannada NewsKarnataka NewsLatest

*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್, ದೂರು ದಾಖಲಾಗುತ್ತಿದ್ದಂತೆ ಎಸ್ಕೇಪ್*

ಪ್ರಗತಿವಾಹಿನಿ ಸುದ್ದಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಅಂದನಗೌಡ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಆರೋಪಿ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಿದ್ದು, ತಲೆಮರೆಸಿಕೊಂಡಿರುವ ಆತನ ಬಂಧನಕ್ಕೆ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಕೊಪ್ಪಳ ಗ್ರಾಮೀಣ ಭಾಗದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂದನಗೌಡ, ಶಾಲಾ ಕೊಠಡಿಯೊಳಗೆ ವಿದ್ಯಾರ್ಥಿನಿಯರನ್ನು ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಹಾಗೂ ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಶಿಕ್ಷಕನ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿಯರು ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ, ಶಿಕ್ಷಕನಿಂದ ಕಿರುಕುಳವಾಗುತ್ತಿದ್ದು ಸಹಾಯ ಮಾಡುವಂತೆ ಮನವಿ ಮಾಡಿದ್ದರು.

ಮಕ್ಕಳ ಸಹಾಯವಾಣಿಯಿಂದ ಮಾಹಿತಿ ಲಭ್ಯವಾದ ಬಳಿಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ (DCPU) ಅಧಿಕಾರಿಗಳು ತಕ್ಷಣ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಧೈರ್ಯವಾಗಿ ಮುಂದೆ ಬಂದ ವಿದ್ಯಾರ್ಥಿನಿಯರು ಶಿಕ್ಷಕನ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದ ಕುರಿತು ಅಧಿಕಾರಿಗಳ ಮುಂದೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮಕ್ಕಳ ರಕ್ಷಣಾ ಘಟಕದ ತನಿಖೆ ಹಾಗೂ ನಿರ್ದೇಶನದ ಬಳಿಕ ಘಟನೆ ನಡೆದ ನಾಲ್ಕು ದಿನಗಳ ನಂತರ ಶಾಲೆಯ ಮುಖ್ಯ ಶಿಕ್ಷಕಿ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ಅಂದನಗೌಡ ವಿರುದ್ಧ ಅಧಿಕೃತ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಕುರಿತು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಭಾಗ್ಲಾ ಪ್ರತಿಕ್ರಿಯಿಸಿ, ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button