
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಶಾಮನೂರು ಶಿವಶಂಕರಪ್ಪ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ನೇರ ನುಡಿಗಳಿಂದ ಹೆಸರುವಾಸಿಯಾಗಿದ್ದರು. ಹಿರಿಯ ನಾಯಕನ ಅಗಲಿಕೆಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.
ಶಾಮನೂರು ಶಿವಶಂಕರಪ್ಪ ಜೀವನ ಸಾಧನೆ:
ಶಾಮನೂರ್ ಶಿವಶಂಕರಪ್ಪರವರು ೧೬ ಜೂನ್ ೧೯೩೧ರಂದು ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಇವರ ಹೆಂಡತಿ ಎಸ್ ಎಸ್ ಪಾರ್ವತಮ್ಮ.
ಶಿವಶಂಕರಪ್ಪನವರು ಕಳೆದ ೩ ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ್ರು. ಕರ್ನಾಟಕ ರಾಜ್ಯದ ಮಾಜಿ ತೋಟಗಾರಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶ್ಯಾಮನೂರ್ ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‍ನ ಅಧ್ಯಕ್ಷರು . ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ ಸರಪಳಿಯಾಗಿರುವ, ಬಾಪುಜಿ ಎಂಜಿನಿಯರಿಂಗ್ ಅಸೋಸಿಯೇಷನ್‍ರ ಅಧ್ಯಕ್ಷರಾಗಿದ್ದರು. ಶಿಕ್ಷಣವಾದಿ ಮತ್ತು ಕೈಗಾರಿಕೋದ್ಯಮಿಯಾಗಿದ್ದು, ಸಕ್ಕರೆ ಮತ್ತು ಡಿಸ್ಟಿಲರೀಸ್‍ನ ವ್ಯಾಪಾರ ಮಾಡುವ ಶ್ಯಾಮನೂರ್ ಗ್ರೂಪ್ ಎಂದು ಕರೆಯಲ್ಪಡುವ ಒಂದು ಉದ್ಯಮದ ಗುಂಪನ್ನೇ ಹೊಂದಿದ್ದರು.
ಶಿವಶಂಕರಪ್ಪನವರು ದಕ್ಷಿಣ ದಾವಣಗೆರೆ ಜಿಲ್ಲೆಯ ೨೦೦೮ ಹಾಗು ೨೦೧೩ರ ವಿಧಾನ ಸಭಾ ಚುನಾವಣೆಯಲ್ಲಿ ಜಯವನ್ನು ಸಾಧಿಸಿ ಕಾಂಗ್ರೆಸ್ ಪಕ್ಷದ ಅತ್ಯಂತ ಅನುಭವಿ ಪ್ರತಿನಿಧಿಯಾಗಿಯೂ ಹಾಗೂ ಸಂಪುಟ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ೨೦೦೮ರ ಚುನಾವಣೆಗಳಲ್ಲಿ ಶಿವಶಂಕರಪ್ಪನವರು ಬಿಜೆಪಿ ಪಕ್ಷದ ಯಶವಂತ ರಾವ್ ಜಾಧವ್ ಅವರನ್ನು ಸುಮಾರು ೫೫೦೦ ಮತಗಳಿಂದ ಸೋಲಿಸಿ ದಾವಣಗೆರೆ ಜಿಲ್ಲೆಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದರು. ಅತ್ಯಂತ ಪ್ರಭಾವಶಾಲಿಯಾದ ರಾಜಕಾರಣಿ ೨೦೦೮ರಿಂದ ತಮ್ಮನ್ನು ತಾವೆ ತೊಡಗಿಸಿಕೊಂಡು ರಾಜ್ಯದ ಅಭಿವೃದ್ಧಿಗಾಗಿ ತಮ್ಮ ಸಮಯ ಹಾಗೂ ಸಂಪನ್ಮೂಲವನ್ನು ಕೇಂದ್ರೀಕರಿಸಿದ್ದ್ರು. ೨೦೧೩ರ ಚುನಾವಣೆಯಲ್ಲಿಯೂ ಸಹ ಶಿವಶಂಕರಪ್ಪನವರು ಮೇಲ್ಕಂಡ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವಿನ ಪತಾಕೆ ಹಾರಿಸಿದ್ದರು. ಒಟ್ಟು ಎಂಟು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ೬ ಬಾರಿ ಶಾಸಕರಾಗಿ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ
ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ, ಮಾಜಿ ಸಚಿವರೂ ಆಗಿರುವ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ನಮ್ಮ ಸಮಾಜದ ಮುಖಂಡರಾಗಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿ ನಮಗೆಲ್ಲ ಮಾರ್ಗದರ್ಶನ ನೀಡುತ್ತಿದ್ದರು. ಪಕ್ಷ ಮತ್ತು ಸಮಾಜ ಸಂಘಟನೆಯಲ್ಲಿ ಮುಂದಾಳತ್ವ ವಹಿಸಿದ್ದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ದೊಡ್ಡ ಮಟ್ಟದ ಕೊಡುಗೆ ನೀಡಿದ್ದರು. ರಾಜ್ಯಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ಮತ್ತು ವೀರಶೈವ ಲಿಂಗಾಯತ ಸಮಾಜಕ್ಕೆ ಅವರ ಕೊಡುಗೆ ಅನನ್ಯವಾದುದು. ಅವರ ನಿಧನದಿಂದ ನಾವು ಒಳ್ಳೆಯ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಅವರ ಅಗಲಿಕೆಯಿಂದ ಅವರ ಕುಟುಂಬಕ್ಕೆ ಆಗಿರುವ ದುುಃಖದಲ್ಲಿ ನಾನೂ ಭಾಗಿಯಾಗುತ್ತೇನೆ. ಅವರ ಬಂಧುಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಬ್ಬಾಳಕರ್ ಹೇಳಿದ್ದಾರೆ.
ಹುಕ್ಕೇರಿ ಶ್ರೀ ಸಂತಾಪ
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ, ಕಾಂಗ್ರೆಸ್ ಶಾಸಕರೂ ಆಗಿರುವ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ, ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ರಾಜ್ಯ ಕಂಡ ಮಹಾನ್ ವ್ಯಕ್ತಿ. ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಶಿಕ್ಷಣ ಸಂಸ್ಥೆಗಳ ಮೂಲಕ ಛಾಪು ಮೂಡಿಸಿದ್ದ ಶಾಮನೂರು ಶಿವಶಂಕರಪ್ಪ ಹಿರಿಯ ಶಾಸಕರು ಆಗಿದ್ದರು. ಇದರ ಜೊತೆಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಅವರ ನಿಧನದಿಂದ ವೀರಶೈವ ಮಹಾಸಭಾದ ದೊಡ್ಡ ಕೊಂಡಿ ಕಳಚಿದಂತಾಗಿದೆ. ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಅವರ ಕುಟುಂಬಕ್ಕರ ಭಗವಂತ ದಯಪಾಲಿಸಲಿ ಎಂದು ಶ್ರೀಗಳು ಪ್ರಾರ್ಥಿಸಿದ್ದಾರೆ.


