Kannada NewsNationalPolitics

*ಪಂಜಾಬ್ ನಲ್ಲಿ ಬದಲಾದ ರಾಜಕೀಯ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಾ ವಾರಿಂಗ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪಂಜಾಬ್ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆಯಾಗಿದೆ. ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಂಜಾಬ್ ವಿಧಾನಸಭಾ ಚುನಾವಣೆಗೆ ಇನ್ನೂ ಸುಮಾರು ಆರು ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆಗೆ ಮುಂದಾಗಿದೆ. ವಾರಿಂಗ್ ಅವರ ರಾಜೀನಾಮೆ ಬಳಿಕ ಮುಂದಿನ 24ರಿಂದ 48 ಗಂಟೆಗಳಲ್ಲಿ ನೂತನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ.

ಮಾಜಿ ಸಚಿವ ವಿಜಯ್ ಇಂದರ್ ಸಿಂಗ್ಲಾ ಅಧ್ಯಕ್ಷ ಸ್ಥಾನಕ್ಕೆ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ಜಲಂಧರ್ ಕಂಟೋನ್ಮೆಂಟ್ ಶಾಸಕ ಹಾಗೂ ಮಾಜಿ ಹಾಕಿ ಆಟಗಾರ ಪರ್ಗತ್ ಸಿಂಗ್ ಮತ್ತು ಗುರುದಾಸ್‌ಪುರ ಸಂಸದ ಸುಖ್ಜಿಂದರ್ ಸಿಂಗ್ ರಾಂಧವಾ ಅವರ ಹೆಸರುಗಳೂ ಚರ್ಚೆಯಲ್ಲಿವೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಬಳಿಕ, ಅದೇ ವರ್ಷದ ಏಪ್ರಿಲ್‌ನಲ್ಲಿ ರಾಜಾ ವಾರಿಂಗ್ ಅವರು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಆದರೆ ಪಕ್ಷದೊಳಗಿನ ಬಣ ರಾಜಕಾರಣ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳು ಸಂಪೂರ್ಣವಾಗಿ ಬಗೆಹರಿಯಲಿಲ್ಲ.

ವಾರಿಂಗ್ ಒಂದು ಬಣದ ನಾಯಕತ್ವ ವಹಿಸಿದ್ದರು ಎನ್ನಲಾಗುತ್ತಿದ್ದರೆ, ಮತ್ತೊಂದು ಬಣ ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ಬೆಂಬಲಕ್ಕೆ ನಿಂತಿತ್ತು. ನವಜೋತ್ ಸಿಂಗ್ ಸಿಧು ಅವರೊಂದಿಗೆ ಉಂಟಾದ ಭಿನ್ನಾಭಿಪ್ರಾಯಗಳ ಬಳಿಕ ಕಾಂಗ್ರೆಸ್ ನಾಯಕತ್ವ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು.

ಇದೀಗ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷದೊಳಗಿನ ಹಳೆಯ ಭಿನ್ನಾಭಿಪ್ರಾಯಗಳು ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಮುಂದಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button