
ಪ್ರಗತಿವಾಹಿನಿ ಸುದ್ದಿ; ಹಾಸನ: ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಭೂಕುಸಿತವುಂಟಾಗಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ಕೆಲದಿನಗಳ ಹಿಂದಷ್ಟೇ ಭೂಕುಸಿತವಾಗಿತ್ತು. ಇದೀಗ ಮತ್ತೆ ಭೂಕುಸಿತ ಸಂಭವಿಸಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಸ್ಥಿತಿ ಎದುರಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯ ಅನೆಮಹಲ್ ಬಳಿ ಭೂಕುಸಿತವಾಗಿದೆ. ಈ ಭಾಗದಲ್ಲಿ ರಸ್ತೆ ಅಗಲೀಕರಣ ಮಾಡಲಾಗಿದೆ. ತಡೆ ಗೋಡೆ ನಿರ್ಮಿಸದೇ ಅವೈಜ್ಞಾನಿಕವಾಗಿ ರಸೆ ಅಗಲೀಕರಣ ಮಾಡಿರುವುದರಿಂದ ಮಣ್ಣು ಕುಸಿಯುತ್ತಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.
ಒಂದೆಡೆ ಹಾಸನ, ಚಿಕ್ಕಮಗಳೂರು, ಸಕಲೇಶಪುರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ನದಿ, ಹಳ್ಳಕೊಳ್ಳಗಳು ಅಪಾಯದಮಟ್ಟದಲ್ಲಿ ಹರಿಯುತ್ತಿದೆ. ಬಿರುಗಾಳಿ ಮಳೆಯಿಂದಾಗಿ ಬೃಹತ್ ಮರಗಳು ಧರೆಗುರುಳುತ್ತಿವೆ. ಈನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ವಾಹನಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ