ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.
ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು.
ಗುಡ್ಡ ಕುಸಿತದಲ್ಲಿ 10 ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ 7 ಜನರ ಮೃತದೇಹ ಪತ್ತೆಯಾಗಿದೆ. ಇನ್ನೂ ಮೂವರ ಬಗ್ಗೆ ಶೋಧ ಕಾರ್ಯ ಮುಂದುವರೆದಿದೆ. ಇನ್ನೊಂದೆಡೆ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್, ಮಿಲಿಟರಿ ಪಡೆಗಳಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಗುಡ್ಡ ಕುಸಿತದಲ್ಲಿ ಸಾವು-ನೋವು ಸಂಭವಿಸಿದ್ದು ದು:ಖ ತಂದಿದೆ. ಅವರ ಕುಟುಂಬಗಳಿಗೆ ಧೈರ್ಯ ತುಂಬುವ ಕೆಲಸವಾಗಬೇಕು ಎಂದರು.
ರಕ್ಷಣಾ ಕಾರ್ಯಾಚರಣೆ, ಪರಿಹಾರ ಕಾರ್ಯಾಚರಣೆಯಲ್ಲಿ ಜಿಲ್ಲಾಡಳಿತದಿಂದಾಗಲಿ, ಸರ್ಕಾರದಿಂದಾಗಲಿ ಯಾವುದೇ ವಿಳಂಬವಾಗಿಲ್ಲ. ಸಚಿವರು, ಶಾಸಕರು ಸ್ಥಳದಲ್ಲಿಯೇ ಇದ್ದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅಧಿವೇಶನ ನಡೆಯುತ್ತಿರುವುದರಿಂದ ನಾನು ಘಟನಾ ಸ್ಥಳಕ್ಕೆ ಬರಲು ಕೊಂಚ ತಡವಾಗಿದೆ ಎಂದರು.
ಇನ್ನು ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದಾಗಿ ಗುಡ್ಡ ಕುಸಿತವಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಕ್ಷಣಾ ಕಾರ್ಯಾಚರಣೆ ಬಳಿಕ ತನಿಖೆ ನಡೆಸಲಾಗುವುದು. ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ