*ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಶಿವಕುಮಾರ ಮೇಟಿ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಚಿಂತನೆ ನಡಿಸಿದ್ದು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಆರ್. ಮೇಟಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬೆಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಮಾನ್ಯತೆ ಪಡೆದಿದ್ದು, ಐಟಿ, ಬಿಟಿ, ಸ್ಟಾರ್ಟ್ ಅಪ್, ಯುನಿಕಾರ್ನ್ ಸೇರಿದಂತೆ ಎಲ್ಲ ರಂಗದ ಉದ್ಯಮಗಳು ಇಲ್ಲಿಯೇ ಸ್ಥಾಪನೆ ಆಗುತ್ತಿರುವುದರಿಂದ ಈ ನಗರಕ್ಕೆ ವಲಸೆ ಬರುವವರ ಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ಒತ್ತಡ ಹೆಚ್ಚುತ್ತಿದೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ ಬೆಳಗಾವಿ ನಡುವೆ ಕಿತ್ತೂರು ಹಾಗೂ ಕಲಬುರ್ಗಿಯಲ್ಲಿ ಎರಡು ಪ್ರತ್ಯೇಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಯೋಜನೆ ರೂಪಿಸಿತ್ತು. ಆದರೆ, ಆ ಯೋಜನೆ ನೆನೆಗುದಿಗೆ ಬಿದ್ದಿದ್ದು, ಹಾಲಿ ರಾಜ್ಯ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ದೃಷ್ಟಿಯಿಂದ ನಮ್ಮ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಮುಂದಾಗಬೇಕು. ಇದರಿಂದ ನಮ್ಮ ಭಾಗದ ವಾಣಿಜ್ಯೋದ್ಯೋಮ, ತೋಟಗಾರಿಕೆ ಹಾಗೂ ಕೃಷಿ ಉತ್ಪನ್ನಗಳ ರಪ್ತು ಮಾಡಲು ಅನುಕೂಲವಾಗಲಿದ್ದು, ರೈತರಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ. ಅಲ್ಲದೇ ಈ ಭಾಗದಲ್ಲಿ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಿ ಉದ್ಯೋಗವಕಾಶಗಳು ಹೆಚ್ಚಾಗುತ್ತವೆ. ಈ ಮೂಲಕ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದ ವಾಣಿಜ್ಯೋದ್ಯಮಿಗಳು, ರೈತ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಚರ್ಚಿಸಿ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ