*ಪರೀಕ್ಷೆಯಲ್ಲಿ ಮಾಸ್ ಕಾಪಿಗೆ ಅವಕಾಶ*: *ವಿದ್ಯಾರ್ಥಿಗಳಿಂದ ಹಣ ಪಡೆದು ಸಾಮೂಹಿಕ ನಕಲು ಮಾಡಲು ಬಿಟ್ಟ ಮೇಲ್ವಿಚಾರಕರು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೆಪಿಎಸ್ ಸಿ ಅಕ್ರಮದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (KSOU) ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳಿಂದ ಹಣ ಪಡೆದು, ಪರೀಕ್ಷೆಯಲ್ಲಿ ಪುಸ್ತಕ, ಮೊಬೈಲ್ ನೀಡಿಕೊಂಡು ಪರೀಕ್ಷೆ ಬರೆಯಲು ಪರೀಕ್ಷಾ ಮೇಲ್ವಿಚ್ಜಾರಕರೇ ಅವಕಾಶ ಮಾಡಿಕೊಟ್ಟಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಫೋಟೀ ವೈರಲ್ ಆಗಿದೆ.
ಶಿವಮೊಗ್ಗ ಜಿಲ್ಲೆಯ ಆಲ್ಕೋಳ ವೃತ್ತದ ಬಳಿ ಇರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಕಚೇರಿಯಲ್ಲಿ ನಡೆಯುತ್ತಿರುವ ಪದವಿ, ಸ್ನಾತಕೋತ್ತರ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ಅಕ್ರಮ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಮಾಸ್ ಕಾಪಿ ಮಾಡಿ ಪರೀಕ್ಷೆ ಬರೆಯುತ್ತಿದ್ದಾರೆ.
ಕಚೇರಿಯ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಅವರ ಕುಮ್ಮಕ್ಕಿನಿಂದಲೇ ಈ ಅಕ್ರಮ ನಡೆಯುತ್ತಿದೆ ಎನ್ನಲಾಗಿದ್ದು, ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿ ಮುಕ್ತವಾಗಿ ಕಾಪಿ ಹೊಡೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ದೂರಲಾಗಿದೆ.
ಇದರಿಂದ ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗುತ್ತಿದೆ. ಹಣ ಪಡೆದು ಈ ರೀತಿ ಸಾಮೂಹಿಕ ನಕಲಿಗೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



