ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಶಿವಮೊಗ್ಗದ ರಾಗಿಗುಡ್ಡದಲ್ಲಿ ಐದು ದಿನಗಳ ಹಿಂದೆ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಉದ್ರಿಕ್ತರ ಗುಂಪು ಮನೆಗಳಿಗೆ ಹಾಗೂ ಸಿಕ್ಕ ಸಿಕ್ಕವರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಪೊಲೀಸರು ಸೇರಿದಂತೆ 7 ಜನರು ಗಾಯಗೊಂಡಿದ್ದರು.
ಶಿವಮೊಗ್ಗದಲ್ಲಿ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದ್ದು, ಐದನೇ ದಿನವಾದ ಇಂದು ಕೂಡ ನಿಷೇಧಾಜ್ಞೆ ಮುಂದುವರೆದಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕಲ್ಲು ತೂರಾಟದಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ವಿಚಾರಿಸಿದ್ದಾರೆ.
ಸಂತ್ರಸ್ತರಾದ ಪ್ರಸನ್ನ, ಸುಶೀಲಾ, ನಂದಿನಿ, ಸುಚಿತ್ರಾ ಅವರ ನಿವಾಸಕ್ಕೆ ಭೇಟಿ ನೀಡಿದ ತಂಡದ ಬಳಿ ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. ಮೆರವಣಿಗೆ ವೇಳೆ ಏಕಾಏಕಿ ನಮ್ಮ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ವಿನಾಕಾರಣ ನಮ್ಮ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ತೊಂದರೆ ಕೊಟ್ಟಿದ್ದಾರೆ. ಈರೀತಿ ಆದರೆ ಮಹಿಳೆಯರು, ಮಕ್ಕಳು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.
ನಳೀನ್ ಕುಮಾರ್ ಕಟೀಲ್ ಜೊತೆ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಅರಗ ಜ್ಞಾನೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ