*ಶಿವಸೇನೆ ನಾಯಕ ಪ್ರದೀಪ್ ಪುರ್ಣೇಕರ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಶಿವಸೇನೆಯ ನಾಯಕ ಪ್ರದೀಪ್ ಪುರ್ಣೇಕರ್ ಅವರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಥಾಣೆಯಲ್ಲಿ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳಿಬ್ಬರು ಪ್ರದೀಪ್ ಪುರ್ಣೇಕರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪ್ರದೀಪ್ ಮೃತಪಟ್ಟಿದ್ದಾರೆ.
ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಮಾನಪಾಡ ಉಪವಿಭಾಗದ ಮುಖ್ಯಸ್ಥಾಗಿ ಪ್ರದೀಪ್ ಪುರ್ಣೇಕರ್ ಕಾರ್ಯನಿರ್ವಹಿಸುತ್ತಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರದೀಪ್ ತಮ್ಮ ಮಾನಪಾಡ ಕಚೇರಿಯಲ್ಲಿರುವಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು, ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಎರಡಕ್ಕಿಂತ ಹೆಚ್ಚು ಸುತ್ತು ಗುಂಡು ಹಾರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರ ತುರ್ತು ಚಿಕಿತ್ಸೆ ಬಳಿಕವೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕಪುರ್‌ಬಾವಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ದುಷ್ಕರ್ಮಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಥಾಣೆಯ ಪ್ರಮುಖ ನಿರ್ಗಮನ ಮಾರ್ಗಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



