
ಪ್ರಗತಿವಾಹಿನಿ ಸುದ್ದಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕೂಡ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡುವ ಮೂಲಕ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಆದೇಶವನ್ನು ಎತ್ತಿ ಹಿಡಿದಿದೆ. ಇದರಿಂದ ರಾಜ್ಯಕ್ಕೆ ಭಾರಿ ಸಂಕಷ್ಟ ಎದುರಾಗಿದೆ.
ದೆಹಲಿಯಲ್ಲಿ ಎಸ್.ಕೆ. ಹಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ CWMA ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಖುದ್ದಾಗಿ ಭಾಗವಹಿಸಿ ರಾಜ್ಯದ ಜಲಾಶಯಗಳ ನೀರಿನ ಅಭಾವದ ಪರಿಸ್ಥಿತಿಯನ್ನು ವಿವರಿಸಿದರು. ತಮಿಳುನಾಡು ಸರ್ಕಾರದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯ ಬಳಿಕ ಮಾತನಾಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಪ್ರಾಧಿಕಾರವು CWRC ಶಿಫಾರಸನ್ನೇ ಅನುಮೋದಿಸಿದ್ದು, ರಾಜ್ಯದ ಮುಂದಿನ ಕಾನೂನು ಕ್ರಮಗಳ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಇತ್ತ ರಾಜ್ಯದಲ್ಲಿ ಈ ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. “ನಮ್ಮ ನೀರು, ನಮ್ಮ ಹಕ್ಕು”, “ತಮಿಳುನಾಡಿಗೆ ಕಾವೇರಿ ನೀರು ಹರಿಸಲ್ಲ” ಎಂಬ ಘೋಷಣೆಗಳೊಂದಿಗೆ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಗಳು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿವೆ.
ಇತ್ತ ರಾಜ್ಯದಲ್ಲಿ ಈ ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. “ನಮ್ಮ ನೀರು, ನಮ್ಮ ಹಕ್ಕು”, “ತಮಿಳುನಾಡಿಗೆ ಕಾವೇರಿ ನೀರು ಹರಿಸಲ್ಲ” ಎಂಬ ಘೋಷಣೆಗಳೊಂದಿಗೆ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಗಳು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿವೆ.
ರಾಜ್ಯದಲ್ಲಿ ಮಳೆಯ ಕೊರತೆ, ಜಲಾಶಯಗಳಲ್ಲಿನ ನೀರಿನ ಅಭಾವ ಹಾಗೂ ಕುಡಿಯುವ ನೀರಿನ ಸಂಕಷ್ಟದ ನಡುವೆ ಹೊರಬಿದ್ದ ಈ ಆದೇಶ ಮತ್ತೊಮ್ಮೆ ಕಾವೇರಿ ಕಿಚ್ಚು ಹೊತ್ತಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಕಾಣುತ್ತಿದೆ



