*ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದೆ: ಬಿವೈ ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ: ಸುಳ್ಳು ಭ್ರಷ್ಟಾಚಾರದ ಆರೋಪದ ಮೂಲಕ ಪ್ರತಿಪಕ್ಷಗಳಿಗೆ ಬೆದರಿಕೆ ಹಾಕಲು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಧೈರ್ಯವಿದ್ದರೆ ನಮ್ಮ ವಿರುದ್ಧದ ಹಗರಣಗಳ ಆರೋಪವನ್ನು ಸಾಬೀತುಪಡಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸವಾಲು ಹಾಕಿದರು.
ಬಿಜೆಪಿ- ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಪತ್ನಿ ಮುಡಾದಿಂದ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ. ಇದು 5 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಗರಣದ ಭಾಗವಾಗಿದೆ. 3.16 ಎಕರೆ ಜಮೀನಿಗೆ ಬದಲಾಗಿ ಅವರು 14 ನಿವೇಶನ ಪಡೆದಿರುವುದು ಅಕ್ರಮವಾಗಿದೆ ಎಂದು ವಾಗ್ದಾಳಿ ನಡೆಸಿದ ವಿಜಯೇಂದ್ರ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣದಲ್ಲೂ ಸಿದ್ದರಾಮಯ್ಯ ಅವರ ಪಾತ್ರವಿದೆ ಎಂದು ಆರೋಪಿಸಿದರು.
‘ಮೈಸೂರು ಚಲೋʼ ಬೃಹತ್ ಪಾದಯಾತ್ರೆ ಅತ್ಯಂತ ಯಶಸ್ವಿಯಾಗಿ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಶೋಷಿತ ಸಮುದಾಯಗಳಿಗೆ, ಆದಿವಾಸಿ ಜನರಿಗಾಗಿ, ಬುಡಕಟ್ಟು ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣವನ್ನು ದರೋಡೆ ಮಾಡಿದ ಈ ನೀಚ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಮುಖವನ್ನು ಕಳಚುವುದಕ್ಕಾಗಿ ನಡೆದು ಬಂದಿದ್ದೇವೆ. ರಾಜ್ಯದ ಜನತೆ ಈ ಸರ್ಕಾರದ ವಿರುದ್ಧ ಸೆಟೆದು ನಿಂತಿದ್ದಾರೆ. ಕಾಂಗ್ರೆಸ್ ಪಾಪದ ಕೊಡ ತುಂಬಿದೆ. ಆದಷ್ಟು ಬೇಗ ಇಂತಹ ಭ್ರಷ್ಟರನ್ನು ಸಲುಹುತ್ತಿರುವ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಳ್ಳದೇ ಹೋದರೆ ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಭ್ರಷ್ಟತನ ಬಯಲಿಗೆ ಬರಲಿದೆ ಎಂದು ಎಚ್ಚರಿಕೆ ನೀಡಿದರು.
ಮೈಸೂರಿನಲ್ಲಿ ಇಂದು ನಡೆದ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ನಡೆಸಿದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವರಾದ ಎಚ್. ಡಿ.ಕುಮಾರಸ್ವಾಮಿ, ಪ್ರಲ್ಹಾದ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್, ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ