Kannada NewsKarnataka NewsLatestPolitics

*ಸಿದ್ದರಾಮಯ್ಯಗೆ ಹೈಕಮಾಂಡ್‌ನಲ್ಲಿ ಕಡಿಮೆಯಾಯ್ತಾ ಪ್ರಭಾವ?*: *5ನೇ ಸಾಲಿನ ಆಸನದ ಸುತ್ತ ಶುರುವಾಯ್ತು ಚರ್ಚೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗ ಮುಂಚೂಣಿಯಲ್ಲಿದ್ದ ಸಿದ್ದರಾಮಯ್ಯ ಅವರಿಗೆ ಈಗ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಆದ್ಯತೆ ಕಡಿಮೆಯಾಗಿದೆಯೇ? ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭದ ಆಸನ ವ್ಯವಸ್ಥೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎರಡನೇ ಸಾಲಿನಲ್ಲಿ ಆಸನ ನೀಡಿದ್ದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಐದನೇ ಸಾಲಿನಲ್ಲಿ ಆಸನ ಕಲ್ಪಿಸಿದ್ದು ಇದೀಗ ಚರ್ಚಗೆ ಕಾರಣವಾಗಿದೆ.

ಸೋಮವಾರ ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕ ಬಿಡುಗಡೆ ಸಮಾರಂಭ ನಡೆದಿತ್ತು. ಆಯ್ದ ಕಾಂಗ್ರೆಸ್ ನಾಯಕರು ಮತ್ತು ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಆಸನ ವ್ಯವಸ್ಥೆಯೇ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಕ್ರಮದ ಮೊದಲ ಸಾಲಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟದ ಪ್ರಮುಖ ನಾಯಕರಿಗೆ ಆಸನ ಮೀಸಲಿಡಲಾಗಿತ್ತು. ಬಿಜೆಪಿಗೆ ಸೇರ್ಪಡೆಯಾಗಿರುವ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರಿಗೂ ಮೊದಲ ಸಾಲಿನಲ್ಲಿ ಸ್ಥಾನ ನೀಡಲಾಗಿತ್ತು.

ಎರಡನೇ ಸಾಲಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕುಟುಂಬಸ್ಥರು ಹಾಗೂ ಹಾಲಿ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು. ಮೂರನೇ ಮತ್ತು ನಾಲ್ಕನೇ ಸಾಲಿನಲ್ಲೂ ಹಲವು ಗಣ್ಯರು ಕುಳಿತಿದ್ದರು. ಆದರೆ, ಕರ್ನಾಟಕದ ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಐದನೇ ಸಾಲಿನಲ್ಲಿ ಆಸನ ನೀಡಲಾಗಿತ್ತು.

ಸಿದ್ದರಾಮಯ್ಯ ಐದನೇ ಸಾಲಿನಲ್ಲಿ ಕುಳಿತಿರುವ ಫೋಟೋಗಳು ಹೊರಬರುತ್ತಿದ್ದಂತೆ ರಾಜಕೀಯ ಚರ್ಚೆ ಮತ್ತಷ್ಟು ಜೋರಾಗಿದೆ. ಇದು ಆಯೋಜಕರಿಂದಾದ ಪ್ರಮಾದವೇ ಅಥವಾ ಕಾಂಗ್ರೆಸ್ ಹೈಕಮಾಂಡ್ ನೀಡಿದ ರಾಜಕೀಯ ಸಂದೇಶವೇ ಎಂಬ ಪ್ರಶ್ನೆಗಳು ಎದ್ದಿವೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯ ಅವರ ಪ್ರಭಾವ ಕಡಿಮೆಯಾಗಿದೆಯೇ ಎಂಬ ಚರ್ಚೆಯೂ ಆರಂಭವಾಗಿದೆ.

ಈ ಬೆಳವಣಿಗೆಗಳ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದೆ ಎಂದು ಸ್ಪಷ್ಟಪಡಿಸಿದರು. ತಾವು ಇನ್ನೂ ಪುಸ್ತಕ ಓದಿಲ್ಲ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮಾತನಾಡಿದರು ಮತ್ತು ಸಂವಾದವೂ ನಡೆಯಿತು. ಆದರೆ, ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ತಿಳಿಸಿದರು. ಬಳಿಕ ಅವರು ಬೆಂಗಳೂರಿಗೆ ವಾಪಸಾದರು.

Related Articles

Back to top button