ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನನ್ನ ಪ್ರಕಾರ ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ. ಅದು ಎಂದೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಳೆದ ಚುನಾವಣೆಯಲ್ಲಿ ರಾಜ್ಯದ ಜನರು ಯಾರಿಗೂ ಬಹುಮತ ನಿಡಲಿಲ್ಲ. ಯಡಿಯೂರಪ್ಪನವರಿಗೆ ಬಹುಮತ ಸಾಬೀತು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಜೆಡಿಎಸ್ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿ, ಕುಮಾರಸ್ವಾಮಿಯವರನ್ನು ಸಿಎಂ ಮಾಡಿದೆವು. ಆದರೆ ಕುಮಾರಸ್ವಾಮಿಗೆ ಸರ್ಕಾರ ಉಳಿಸಿಕೊಳ್ಳಲು ಆಗಿಲ್ಲ ಎಂದು ಕಿಡಿಕಾರಿದರು.
ಜೆಡಿಎಸ್ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲ್ಲ. ಇನ್ನೊಬ್ಬರ ಹೆಗಲ ಮೇಲೆ ಕುಳಿತು ಅಧಿಕಾರಕ್ಕೆ ಬರೋರು. ನನ್ನ ಪ್ರಕಾರ ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ. ಕುಮಾರಸ್ವಾಮಿ ಕಣ್ಣೀರು ಹಾಕುತ್ತ ಮಾತನಾಡುತ್ತಾರೆ. ಮೊನ್ನೆ ಶಿರಾಗೆ ಬಂದೂ ಕಣ್ಣೀರಿಟ್ಟಿದ್ದಾರೆ ಎಂದು ಲೇವಡಿ ಮಾಡಿದರು.
ಯಡಿಯೂರಪ್ಪ ಅಧಿಕಾರ ದಾಹದಿಂದ ನೂರಾರು ಕೋಟಿ ಖರ್ಚು ಮಾಡಿದರು. ಒಬ್ಬೊಬ್ಬ ಶಾಸಕರಿಗೂ 25 ಕೋಟಿ ಖರ್ಚು ಮಾಡಿ ರಾಜೀನಾಮೆ ಕೊಡಿಸಿ, ಆ ಮೂಲಕ ಸರ್ಕಾರ ರಚನೆ ಮಾಡಿದರು. ಅಂದು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಮುನಿರತ್ನ. ಹೀಗಾಗಿ ಕಳೆದ ಒಂದು ವರ್ಷಗಳಿಂದ ಆರ್.ಆರ್ ನಗರಕ್ಕೆ ಶಾಸಕರೇ ಇರಲಿಲ್ಲ. ಈಗ ಉಪಚುನಾವಣೆ ಘೋಷಣೆಯಾಗಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ