Belagavi NewsBelgaum NewsKannada NewsKarnataka NewsLatestPolitics

*ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬೃಹತ್ ಕೈಗಾರಿಗೆ ಸ್ಥಾಪನೆ; ಸ್ಥಳೀಯರಿಗೆ ಉದ್ಯೋಗ; ಸಿಎಂ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಮಹತ್ವದ ಘೋಷಣೆ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಘೋಷಿಸಿದರು.

ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು ರೂ.1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲಾಗುತ್ತದೆ.

ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು. ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದರು.

ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ. ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತರರಾಷ್ಟ್ರೀಯವಾಗಿಯೂ ಮಹತ್ವ ಪಡೆದಿವೆ. ಆದರೆ ಇದಕ್ಕೆ ಸಾಕಷ್ಟು ಮಹತ್ವ ನೀಡದೆ ಹಿನ್ನಡೆಯನ್ನು ಅನುಭವಿಸುತ್ತಿದೆ. ನಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸುತ್ತೇವೆ ಎಂದು ತಿಳಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button