ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ.
ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಈ ಪಕ್ಷದ್ರೋಹಿ ಶಿಂಧೆ ಅವರ ಪಕ್ಷ ಈ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ