*ಕಲುಷಿತ ನೀರಿಗೆ 6 ಜನ ಬಲಿ; ಮೃತರ ಕುಟುಂಬಕ್ಕೆ ಉದ್ಯೋಗದ ಭರವಸೆ ನೀಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರಹಟ್ಟಿಯಲ್ಲಿ ಸಂತ್ರಸ್ಥ ಕುಟುಂಬಗಳ ಬಂಧುಗಳನ್ನು ಮಾತಾಡಿಸಿದ ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಈ ಭರವಸೆ ನೀಡಿದರು.
ಸಂತ್ರಸ್ಥ ಕುಟುಂಬಗಳ ಜವಾಬ್ದಾರಿ ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ. ಮನೆಯನ್ನೂ ಕಟ್ಟಿಸಿಕೊಡುತ್ತೇವೆ ಎಂದರು.
ಶುದ್ದ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದೆ. ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಿದೆವು ಎಂದು ವಿವರಿಸಿದರು.
ಮೊದಲೇ ಶುದ್ದ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ದ ಕುಡಿಯುವ ನೀರಿಗೆ ತೊಂದರೆ ಆಗದಂತೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.
123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಿದೆ. ಬರ ಪೀಡಿತ ಜಿಲ್ಲೆಗಳ ಸಂಖ್ಯೆ ಹೆಚ್ಚುತ್ತಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. 30 ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ನಾವು NDRF ಅಡಿಯಲ್ಲಿ ಕೇಂದ್ರಕ್ಕೆ ಪರಿಹಾರ ಕೇಳಿದ್ದೇವೆ. ಸದ್ಯ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಬಂದಿದ್ದು ನಾಳೆ ಚಿತ್ರದುರ್ಗಕ್ಕೂ ಬರಲಿದೆ ಎಂದು ವಿವರಿಸಿದರು.
ಇಂದು ಇಡೀ ದೇಶದಲ್ಲಿ ಬರಗಾಲದ ಸ್ಥಿತಿ ಇದೆ. ರಾಜ್ಯದಲ್ಲೂ ಬರ ಇದ್ದು ಕುಡಿಯುವ ನೀರು, ರಾಸುಗಳಿಗೆ ಮೇವು- ನೀರು ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಉದ್ಯೋಗ ಸೃಷ್ಟಿ ಮಾಡಬೇಕು. ಕೆಲಸಕ್ಕಾಗಿ ವಲಸೆ ಹೋಗುವ ಸ್ಥಿತಿ ಬರದಂತೆ ನೋಡಿಕೊಳ್ಳಲು ಎಚ್ಚರಿಸಿದ್ದೇನೆ ಎಂದರು.
ನಮ್ಮ ಸರ್ಕಾರ ಬಡವರ, ಮಧ್ಯಮ ವರ್ಗದವರ ಸಂಕಷ್ಟ ಬಗೆಹರಿಸುವ ಸಲುವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.
ಕೃಷಿ ಸಚಿವ ಚಲುವರಾಯಸ್ವಾಮಿ, ಜಿಲ್ಲಾ ಸವಿವ ಡಿ.ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ, ಮಾಜಿ ಸಚಿವ ಎಚ್.ಆಂಜನೇಯ ಸೇರಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ