
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜಿನಾಮೆಗೆ ಒತ್ತಾಯಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಬೆನ್ನಲ್ಲೇ ಕೋಟಿ ಕೋಟಿ ಹಣ ಪತ್ತೆ ಪ್ರಕರಣ ಸಂಬಂಧ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಕಿಡಿಕಾರಿರುವ ಕಾಂಗ್ರೆಸ್ ನಾಯಕರು ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಿಂದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಮನೆವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕರು ಹಾಗೂ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು, ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮಾರ್ಗಮಧ್ಯೆ ತಡೆಯೊಡ್ಡಿದ್ದಾರೆ.
ಪೊಲೀಸರು ಪ್ರತಿಭಟನಾಕಾರರನ್ನು ತದೆಯುತ್ತಿದ್ದಂತೆ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ ಸೇರಿದಂತೆ ಕಾಂಗ್ರೆಸ್ ನಾಯಕರು ರಸ್ತೆಯಲ್ಲಿಯೇ ಕುಳಿತು ಧರಣಿ ನಡೆಸಿದರು. ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.