ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರು ಬೇಗ ಗುಣಮುಖರಾಗಲೆಂದು ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯದ ಅನೇಕ ಮುಖಂಡರು ಹಾರೈಸಿದ್ದಾರೆ.
ಆಸ್ಪತ್ರೆಯಲ್ಲಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಡಿಸಿಎಂ ಡಾ.ಅಶ್ವಥ್ ನಾರಾಯಣ, ಸಚಿವರಾದ ಬಿ ಶ್ರೀರಾಮುಲು, ಡಾ. ಸುಧಾಕರ್ ಸೇರಿದಂತೆ ಹಲವು ಸಚಿವರು ಸಿದ್ದರಾಮಯ್ಯ ಅವರಿಗೆ ಶುಭ ಹಾರೈಸಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕೊರೋನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ವಿರೋಧ ಪಕ್ಷದ ನಾಯಕ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕೊರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು, ಶಿಸ್ತುಬದ್ಧ ಜೀವನ ಅಳವಡಿಸಿಕೊಳ್ಳುವ ಮೂಲಕ ಅಮೂಲ್ಯವಾದ ಜೀವ ಮತ್ತು ಜೀವನವನ್ನು ರಕ್ಷಿಸಿಕೊಳ್ಳಬೇಕು ಎಂದು ವಿನಮ್ರವಾಗಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ ಕೂಡ ಟ್ವೀಟ್ ಮಾಡಿದ್ದು, ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದಸಿದ್ದರಾಮಯ್ಯನವರು ಕೊರೋನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ