ಪ್ರಗತಿವಾಹಿನಿ ಸುದ್ದಿ: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಹಾಗೂ ಭ್ರಷ್ಟಾಚಾರದ ದರಪಟ್ಟಿ ಜಾಹೀರಾತು ಪ್ರಕಟಿಸಿ ಬಿಜೆಪಿ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ನೀಡಿ, ಖುದ್ದು ಹಾಜರಾತಿಗೆ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಖುದ್ದು ಹಾಜರಾಗಿದ್ದರು. ಆದರೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗದೇ ವಿನಾಯಿತಿ ಕೇಳಿದ್ದಾರೆ. ಮುಂದಿನ ವಿಚಾರಣೆಗೆ ಹಾಜರಾಗುವುದಾಗಿ, ಈ ಬಾರಿ ವಿನಾಯಿತಿ ನೀಡುವಂತೆ ಅವರ ಪರ ವಕೀಲರು ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕೋರ್ಟ್ ಗೆ ಖುದ್ದು ಹಾಜರಾಗಿ, ಜಾಮೀನು ನೀಡುವಂತೆ ಅರ್ಜಿ ಮೂಲಕ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ಬಾಂಡ್ ಗಳಿಗೆ ಸಹಿ ಹಾಕಿಸಿಕೊಂಡು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಜಾಮೀನು ಮಂಜೂರು ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ