*ಚಾಮುಂಡಿ ದೇವಿಗೆ ಹರಕೆ ತೀರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್*


ಪ್ರಗತಿವಾಹಿನಿ ಸುದ್ದಿ; ಮೈಸೂರು: ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸುವುದಾಗಿ ನಾಡ ಅದಿ ದೇವತೆ ಚಾಮುಂಡೇಶ್ವರಿ ತಾಯಿಗೆ ಹರಕೆ ಹೊತ್ತಿದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಕೆಪಿಸಿಸಿ ವತಿಯಿಂದ ಹರಕೆ ತೀರಿಸಿದರು.
ನಾಳೆ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಸಚಿವರು, ಶಾಸಕರು ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ.
ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಿದರು. ಹಸಿರು ಹಾಗೂ ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಹಾಗೂ ಫಲ ಸಮರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೇ 9ರಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಬಂದು 5 ಗ್ಯಾರಂಟಿ ಯೋಜನೆ ಜಾರಿಗೆ ತರುವುದಾಗಿ ಹರಕೆ ಹೊತ್ತಿದ್ದೆವು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಿನ್ನೆಗೆ 100 ದಿನವಾಗಿದ್ದು, ಜನರಿಗೆ ನಾವು ಕೊಟ್ಟ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತಂದಿದ್ದೇವೆ. ನಾಳೆ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಯಾಗಲಿದೆ. ಹಾಗಾಗಿ ಇಂದು ನಾಡ ದೇವತೆ ಚಾಮುಂಡಿ ದೇವಿಗೆ ಹರಕೆ ತೀರಿಸಿದ್ದೇವೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ