ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಎದುರಾಗುವ ತಾಂತ್ರಿಕ ತೊಂದರೆಗಳನ್ನು ಎರಡು ತಿಂಗಳ ಒಳಗಾಗಿ ಬಗೆಹರಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಬೇಕು. ಇನ್ನಿತರ ತೊಡಕುಗಳನ್ನು ಆದಷ್ಟು ಬೇಗನೆ ನಿವಾರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಮೀನು ಹಸ್ತಾಂತರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನಸೌಧದಲ್ಲಿ ನಡೆದ ಜಿಲ್ಲಾಢಿಕಾರಿಗಳು, ಸಿಇಒಗಳು, ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭೂಸ್ವಾಧೀನ ಪ್ರಕ್ರಿಯೆ ಕಾರಣದಿಂದ ಯೋಜನೆ ಅನುಷ್ಠಾನ ವಿಳಂಬವಾಗಬಾರದು. ಆದ್ಯತೆ ಮೇರೆಗೆ ಈ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು ಎಂದರು.
ಇದೇ ವೇಳೆ ಸಣ್ಣ ನೀರಾವರಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಒಟ್ಟು 40998 ಕೆರೆಗಳಿದ್ದು, ಇವುಗಳ ಪೈಕಿ 28751 ಕೆರೆಗಳ ಅಳತೆ ಕಾರ್ಯ ಪೂರ್ಣಗೊಳಿಸಲಾಗಿದೆ. 10931 ಕೆರೆಗಳಲ್ಲಿ ಒತ್ತುವರಿಯನ್ನು ಗುರುತಿಸಲಾಗಿದ್ದು, 6065 ಕೆರೆಗಳ ಒತ್ತುವರಿ ತೆರವು ಪೂರ್ಣಗೊಳಿಸಲಾಗಿದೆ. ಇನ್ನೂ 4787 ಕೆರೆಗಳ ಒತ್ತುವರಿ ತೆರವಿಗೆ ಬಾಕಿಯಿದ್ದು, ಆದಷ್ಟು ಬೇಗನೆ ಅಳತೆ ಕಾರ್ಯ ಪೂರ್ಣಗೊಳಿಸಿ ತೆರವು ಕಾರ್ಯ ಪೂರ್ಣಗೊಳಿಸಬೇಕು. ಪದೇ ಪದೇ ಕೆರೆಗಳ ಒತ್ತುವರಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದರು.
ಬೆಂಗಳೂರಿನಲ್ಲಿ ಈಗಾಗಲೇ ಹಲವು ಕೆರೆಗಳು ಕಣ್ಮರೆಯಾಗಿದ್ದು, ಉಳಿದಿರುವ ಕೆರೆಗಳನ್ನು ಉಳಿಸದೇ ಇದ್ದರೆ, ಅಂತರ್ಜಲ ಮಟ್ಟವನ್ನು ಕಾಪಾಡಲು ಸಾಧ್ಯವಿಲ್ಲ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ