ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಇನ್ನೆರಡು ದಿನಗಳಲ್ಲಿ ನೂತನ ನಾಯಕರ ನೇಮಕ ಮಾಡುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಲಿರುವುದು ಮಹತ್ವ ಪಡೆದುಕೊಂಡಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾಗಿದ್ದ ವಿಪಕ್ಷ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಗಳಿಗೆ ನಾಯಕರ ಆಯ್ಕೆ ವಿಚಾರ ನಿಟ್ಟಿನಲ್ಲಿ ಹೈಕಮಾಂಡ್ ಚಿಂತನೆ ನಡೆಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯರನ್ನು ಹೈಕಮಾಂಡ್ ದೆಹಲಿಗೆ ಕೆರಸಿಕೊಂಡಿದೆ.
ಉಪಚುನಾವಣೆ ಸೋಲಿನ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೂ, ಇಲ್ಲಿಯವರೆಗೂ ಹೈಕಮಾಂಡ್ ಅಂಗೀಕರಿಸಿಲ್ಲ. ಹೀಗಾಗಿ ಈ ಸ್ಥಾನದಲ್ಲಿ ಸಿದ್ದರಾಮಯ್ಯರನ್ನೇ ಮುಂದುವರಿಸುವ ಸಾಧ್ಯತೆ ಇದೆ. ಈ ಮಧ್ಯೆ ಸಿದ್ದರಾಮಯ್ಯರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ನೀಡಬೇಕೆಂದು ತಮ್ಮ ಬೆಂಬಲಿಗರು ಪಟ್ಟುಹಿಡಿದಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪುವ ಸಾಧ್ಯತೆಗಳಿವೆ ಎನ್ನಲಾಗಿತ್ತು. ಒಕ್ಕಲಿಗರ ಬದಲಿಗೆ ಲಿಂಗಾಯತರಿಗೆ ಮಣೆ ಹಾಕಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ಹೇಳಲಾಗುತ್ತಿತ್ತು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಎಂ.ಬಿ. ಪಾಟೀಲ್ ಅಥವಾ ಈಶ್ವರ್ ಖಂಡ್ರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಮಾತು ಕೇಳಿಬಂದಿದ್ದು, ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದವರಿಗೆ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಚಿಂತನೆ ನಡೆಸಲಾಗಿದೆ. ಈ ನಿರ್ಧಾರದ ಹಿಂದೆ ಸಿದ್ಧರಾಮಯ್ಯ ಬಣದ ಕೈವಾಡವಿದೆ ಎನ್ನಲಾಗಿದೆ.
ಒಟ್ಟಾರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕ ಸ್ಥಾನಕ್ಕೆ ಹೈಕಮಾಂಡ್ ಯಾರನ್ನು ಸೂಚಿಸಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ