*ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕೂಗು ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಬೆಳಗಾವಿಯಲ್ಲಿ ಈ ರೀತಿ ಪ್ರತಿಕ್ರಿಯೆ ನೀಡಿದರು.
ಹೋರಾಟಕ್ಕೆ ವಿರೋಧವಿಲ್ಲ
ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದರು.
ನಾಳೆ ಅಂತ್ಯಕ್ರಿಯೆಯಲ್ಲಿ ಭಾಗಿ
ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರು ಅವರು ದಕ್ಷ ಆಡಳಿತಗಾರ . ವಿಧಾನ ಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆಗಳ ಸದಸ್ಯರಾಗಿದ್ದ ಎಸ್ ಎಂ ಕೃಷ್ಣ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ವಿಧಾನಸಭೆ ಸ್ಪೀಕರ್ ಆಗಿ , ರಾಜ್ಯಪಾಲರಾಗಿ ಕೆಲಸ ಮಾಡಿರುವ ಸಜ್ಜನ ರಾಜಕಾರಣಿಯಾಗಿದ್ದರು. ಡಾ. ರಾಜ್ ಕುಮಾರ್ ಅವರ ಅಪಹರಣದ ಸವಾಲನ್ನು ಸಮರ್ಥವಾಗಿ ಎದುರಿಸಿದ್ದರು. 92 ವರ್ಷದ ಎಸ್ ಎಂ ಕೃಷ್ಣ ಅವರು ಕಳೆ ದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನದಿಂದ ರಾಜ್ಯ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿ ದೊರೆಯಲಿಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರನ್ನು ಭೇಟಿಯಾಗಿದ್ದೆ. ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವುದಾಗಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ