*ವಿದ್ಯಾರ್ಥಿಗಳಿಂದ ಶಾಲೆ ಶೌಚಾಲಯ ಸ್ವಚ್ಛತೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ*

ಸಿಎಂ ಸಿದ್ದರಾಮಯ್ಯ ಭರವಸೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇಜುಗಳ ಹಾಸ್ಟೆಲ್‌ಗಳಲ್ಲಿಯೂ ಈ ಬಗ್ಗೆ ನಿಗಾವಹಿಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.
ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು ಮತ್ತು ಅವುಗಳನ್ನು ಪ್ರತಿದಿನ ಶುಚಿಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಒಂದು ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ