Kannada NewsKarnataka NewsPolitics

*ಎಲ್ಲಾ 14 ಸೈಟ್ ಗಳನ್ನು ಮುಡಾಕ್ಕೆ ವಾಪಸ್ ನೀಡಿದ ಸಿದ್ದರಾಮಯ್ಯ ಪತ್ನಿ* *ಭಾವನಾತ್ಮಕ ಪತ್ರ ಬರೆದ ಪಾರ್ವತಿ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಡಾ ಹಗರಣ ತಾರಕಕ್ಕೇರುತ್ತಿರುವಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ತಮಗೆ ನೀಡಲಾಗಿದ್ದ ಎಲ್ಲ 14 ಸೈಟ್ ಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಾಪಸ್ ನೀಡಿದ್ದಾರೆ.

ಈ ಕುರಿತು ಮಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆದು ಮೈಸೂರು ಜಯನಗರದಲ್ಲಿ ತಮಗೆ ನೀಡಲಾಗಿದ್ದ ಎಲ್ಲ ಸೈಟ್ ಗಳನ್ನು ವಾಪಸ್ ಪಡೆಯುವಂತೆ ಕೋರಿದ್ದಾರೆ.

ಜೊತೆಗೆ ಪತ್ರಿಕಾ ಪ್ರಕಟಣೆಯೊಂದನ್ನೂ ನೀಡಿರುವ ಪಾರ್ವತಿ, ಮುಡಾ ಸೈಟ್ ವಾಪಸ್ ಮಾಡುವ ಸಂಬಂಧ ಸಿದ್ದರಾಮಯ್ಯ ಜೊತೆಗಾಗಲಿ, ಮಕ್ಕಳ ಜೊತೆಗಾಗಿ ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ ಎಂದಿದ್ದಾರೆ.

ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ ಎಂದು ಪಾರ್ವತಿಳಿಸಿದ್ದಾರೆ.

ಮುಡಾಕ್ಕೆ ಬರೆದಿರುವ ಪತ್ರ

ಮಾನ್ಯರೇ,

ವಿಷಯ: ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ನನಗೆ ಮಂಜೂರು ಮಾಡಲಾದ 14 ನಿವೇಶನಗಳನ್ನು ಹಿಂದಿರುಗಿಸುವ ಕುರಿತು.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ.

ಮುಂದುವರಿದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ.

ಪಾರ್ವತಿ ನೀಡಿರುವ ಪತ್ರಿಕಾ ಪ್ರಕಟಣೆ:

ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು.

ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು.

ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು.

ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.

ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ.

ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ.

ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ.

ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ.

ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ.

ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ.

ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ.

ಶ್ರೀಮತಿ ಪಾರ್ವತಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button