Kannada NewsKarnataka NewsLatestPolitics

*ಸಂಸದ ತೇಜಸ್ವಿ ಸೂರ್ಯ ಅವರಿಂದ ಯೋಧರಿಗೆ ಅಪಮಾನ; ಬಹಿರಂಗ ಕ್ಷಮೆಯಾಚಿಸುವಂತೆ ಸಿಎಂ ಸಿದರಾಮಯ್ಯ ಆಗ್ರಹ*

ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ; ಸಿಎಂ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂತು. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್ ಅನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು ತಿರುಚಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಈ ಸಂಸದನಲ್ಲಿ ಕಿಂಚಿತ್ತು ಮಾನ – ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.

ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ.

ಆದರೆ ಈ ಬಿಜೆಪಿ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಕಿಡಿಕಾರಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button