Kannada NewsKarnataka NewsLatestPolitics

*ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ*

ಜನರು ಮತ್ತು ಹೈ ಕಮಾಂಡ್ ಆಶೀರ್ವಾದ: 2ನೇ ಬಾರಿ ಸಿಎಂ ಆಗಿ ದೇವರಾಜ ಅರಸು ದಾಖಲೆ ಮುರಿದಿದ್ದೇನೆ

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಅವರು ಇಂದು ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವಿಜಯಪುರ ಜಿಲ್ಲೆ ವತಿಯಿಂದ ವಿಜಯಪುರ ದ ವಿ. ಬಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರೆವೇರಿಸಿ ಮಾತನಾಡಿದರು.

ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆಗಳನ್ನು ಅರ್ಪಿಸಿದರು.

Home add -Advt

ವಿಜಯಪುರದ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಎಂದರು. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದು, ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ ಎಂದರು.

82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ 730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ

ವಿಜಯಪುರ ಜಿಲ್ಲೆಯಲ್ಲಿ 800 ಕ್ಕೂ ಹೆಚ್ಚು ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ 730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದರು .

ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್
ಈ ಭಾಗದಲ್ಲಿ ಸೈಕ್ಲಿಸ್ಟ್ ಗಳಿಗಾಗಿ , ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್ ನ್ನು ಸ್ಥಾಪಿಸಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ
ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹಿಂದಿನ ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದರು.

160 ಕೋಟಿ ವೆಚ್ಚದ ಮೇಲ್ಸೇತುವೆ:
ಬಸನಗೌಡ ಯತ್ನಾಳ್ ಅವರು ಅನೇಕ ಬೇಡಿಕೆಗಳನ್ನು ಇಟ್ಟಿದ್ದು, ಕನಕದಾಸ ವೃತ್ತದಿಂದ ಅಂಬೇಡ್ಕರ್ ಹಾಗೂ ಶಿವಾಜಿ ವೃತ್ತದವರೆಗೆ 160 ಕೋಟಿ ವೆಚ್ಚದ ಮೂರು ಕಿಮೀ ಮೇಲ್ಸೇತುವೆ ಮಾಡಬೇಕೆಂದು ಮನವಿ ಮಾಡಿದ್ದು ಅದನ್ನು ನೆರವೇರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್, ಸಚಿವ ಶಿವಾನಂದ ಪಾಟೀಲ್, ಶಾಸಕ, ಬಸನಗೌಡ ಯತ್ನಾಳ್, ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button