Karnataka News

*ದೇವದಾಸಿ ಪದ್ಧತಿ ಕಂಡುಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಖಡಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಹಲವು ಎಚ್ಚರಿಕೆ ನೀಡಿದರು.

ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಖಡಕ್ ವಾರ್ನಿಂಗ್ ಕೊಟ್ಟರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ

ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಪ್ರಶ್ನಿಸಿದರು.

ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸಿಎಂ ಸೂಚಿಸಿದರು.

ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು.

ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತಗೊತೀವಿ

ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು

ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ

ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ Review ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.

• ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್‌ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು. ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಒದಗಿಸುವುದು ಎಲ್ಲರ ಜವಾಬ್ದಾರಿ.

• ದೌರ್ಜನ್ಯ ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿಯನ್ನು ನಿಗದಿತ ಅವಧಿಯ ಒಳಗಾಗಿ ಸಲ್ಲಿಸಬೇಕು.

• ಬ್ಯಾಕ್‌ಲಾಗ್‌, ನೇಮಕಾತಿ ಮತ್ತು ಮುಂಬಡ್ತಿ ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಈ ಕುರಿತು ಇಲಾಖೆವಾರು ಸಭೆ ನಡೆಸಲು ಮುಖ್ಯಕಾರ‍್ಯದರ್ಶಿಯವರಿಗೆ ಸೂಚನೆ.

• ದೇವದಾಸಿ ಪದ್ದತಿ ಯಾವುದೇ ಜಿಲ್ಲೆಗಳಲ್ಲಿ ನಡೆದರೆ ಅದಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ ಅವರೇ ನೇರ ಹೊಣೆ. ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಈ ಕುರಿತು ಯಾವುದೇ ದೂರಿಗೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು.

• ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3430 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಇನ್ನೂ ಬಾಕಿಯಿದ್ದು, ಇದನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು.

• ಹಕ್ಕುಪತ್ರ ನೀಡಿದ ಬಳಿಕ ಪಹಣಿಯಲ್ಲಿ‌ ಅವರ ಹೆಸರು ನಮೂದಿಸುವ ಕಾರ್ಯ ತ್ವರಿತಗೊಳಿಸಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಇದನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು.

• ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. 60ದಿನಗಳ ಒಳಗಾಗಿ ಆರೋಪಪಟ್ಟಿ ದಾಖಲಿಸಬೇಕು. ಇನ್ನೂ 665 ಪ್ರಕರಣಗಳು ತನಿಖೆಗೆ ಬಾಕಿಯಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನ್ಯಾಯಾಲಯಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗುವುದನ್ನು ಒಪ್ಪಲು ಸಾಧ್ಯವಿಲ್ಲ.

• ಪ್ರತಿ ಜಿಲ್ಲೆಯಲ್ಲಿ ಡಿಸಿಆರ್‌ಇ ಕೋಶವನ್ನು‌ ಸ್ಥಾಪಿಸುವ ಕುರಿತು ಈಗಾಗಲೇ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

• ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಬೇಕು. ಪ್ರಾಸಿಕ್ಯೂಶನ್ ಸಹ ಪರಿಶೀಲನೆ ನಡೆಸಬೇಕು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಈ ಸಭೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗುವುದು.

• ಮೃತಪಟ್ಟ ಪ್ರಕರಣಗಳಲ್ಲಿ ಅನುಕಂಪ ಆಧಾರದ ಉದ್ಯೋಗಕ್ಕಾಗಿ ಮೃತಪಟ್ಟ ದಿನಾಂಕದಿಂದ 3 ವರ್ಷದ ಒಳಗೆ, ಅಪ್ರಾಪ್ತ ವಯಸ್ಸಿನ ಮಕ್ಕಳು 18 ವರ್ಷಗಳನ್ನು ಪೂರೈಸತಕ್ಕದ್ದು, ಎಂಬ ಮಿತಿಯನ್ನು ತೆಗೆದು ಹಾಕುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

• ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button