*ಸೌಮ್ಯಾ ರೆಡ್ಡಿ ರಾಜೀನಾಮೆ ಬಹಿರಂಗ*: *ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ?*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕಾಂಗ್ರೆಸ್ನಲ್ಲಿ ಮಹಿಳಾ ಪ್ರಾತಿನಿಧ್ಯದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಸಚಿವ ಸ್ಥಾನ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಶೇಷವೆಂದರೆ, ಆಗಸ್ಟ್ 20ರಂದೇ ರಾಜೀನಾಮೆ ಪತ್ರ ಕಳುಹಿಸಿದ್ದರೂ ಈ ಬೆಳವಣಿಗೆ ಈಗ ಬಹಿರಂಗವಾಗಿದೆ. ಹೊಸ ಅಧ್ಯಕ್ಷರ ನೇಮಕವಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯುವುದಾಗಿ ಸೌಮ್ಯಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರಿಗೆ ಸೌಮ್ಯಾ ರೆಡ್ಡಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಎರಡು ವರ್ಷಗಳ ಅವಧಿಗೆ ಈ ಜವಾಬ್ದಾರಿ ವಹಿಸಿಕೊಂಡಿದ್ದೆ, ಈಗ ಆ ಅವಧಿ ಪೂರ್ಣಗೊಂಡಿದೆ. ಮತ್ತೊಬ್ಬರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವಂತೆ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗದಿರುವುದು ಸೌಮ್ಯಾ ರೆಡ್ಡಿ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ. ಈ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತಂದು, ಮಹಿಳಾ ಸಚಿವರನ್ನು ನೇಮಿಸುವಂತೆ ಒತ್ತಾಯಿಸಿದ್ದಾರೆ. ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ ನೀಡುವ ಪಕ್ಷದ ಆಡಳಿತದಲ್ಲಿ ಮಹಿಳೆಯರಿಗೆ ಸಚಿವ ಸ್ಥಾನವೇ ಇಲ್ಲದಿರುವ ಬಗ್ಗೆ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
ತಮ್ಮ ಅಧಿಕಾರಾವಧಿಯ ಅನುಭವವನ್ನು ಸ್ಮರಿಸಿರುವ ಸೌಮ್ಯಾ ರೆಡ್ಡಿ, ರಾಜ್ಯಾದ್ಯಂತ ಪ್ರವಾಸ ಮಾಡಿ ಮಹಿಳೆಯರನ್ನು ಭೇಟಿಯಾಗಲು, ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ಸಬಲೀಕರಣದ ಕುರಿತು ಚರ್ಚಿಸಲು ಅವಕಾಶ ಸಿಕ್ಕಿದ್ದು ಸಂತೋಷದ ಸಂಗತಿ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿರುವುದನ್ನು ತಳಮಟ್ಟದಲ್ಲಿ ಕಂಡಿದ್ದೇನೆ ಎಂದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ, ಸಚಿವರು ಮತ್ತು ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿರುವ ಸೌಮ್ಯಾ ರೆಡ್ಡಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷದೊಂದಿಗೆ ಮುಂದುವರಿಯುವುದಾಗಿ ಹೇಳಿದ್ದಾರೆ. 2028ರ ವಿಧಾನಸಭಾ ಚುನಾವಣೆ ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ ನಿಷ್ಠಾವಂತ ಕಾರ್ಯಕರ್ತೆಯಾಗಿ ದುಡಿಯುವುದಾಗಿ ಭರವಸೆ ನೀಡಿದ್ದಾರೆ.
ಆಗಸ್ಟ್ 20ರಂದು ಸಲ್ಲಿಸಿದ್ದ ರಾಜೀನಾಮೆ ಪತ್ರ ಅಕ್ಟೋಬರ್ 17ರಂದು ಸಾರ್ವಜನಿಕವಾಗಿ ಬೆಳಕಿಗೆ ಬಂದಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮಹಿಳಾ ಪ್ರಾತಿನಿಧ್ಯ, ಸಚಿವ ಸಂಪುಟದಲ್ಲಿ ಮಹಿಳೆಯರ ಸ್ಥಾನ ಮತ್ತು ಪಕ್ಷದ ಸಂಘಟನೆಯ ಮುಂದಿನ ನಾಯಕತ್ವದ ಬಗ್ಗೆ ಈಗ ಗಮನ ಹರಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ


