Kannada NewsKarnataka NewsLatest
*ಪ್ರಸಿದ್ಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹೆಸರಲ್ಲಿ ಆನ್ ಲೈನ್ ವಂಚನೆ: ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರಸಿದ್ಧ ದೇವಾಲಯಗಳಾದ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಮಠ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆ ಹೆಸರಲ್ಲಿ ಆನ್ ಲೈನ್ ಮೂಲಕ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಇಬ್ಬರನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
ತೆಲಂಗಾಣ ಮೂಲದ ಸುದೀಪ್ ಹಾಗೂ ಅನಿಲ್ ಬಂಧಿತ ಆರೋಪಿಗಳು. ಪ್ರತಿಷ್ಠಿತ ದೇವಾಲಯಗಳ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ಭಕ್ತರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದರು. ಆರೋಪಿಗಳ ಬಂಧನಕ್ಕಾಗಿ ಚಿಕ್ಕಮಗಳೂರು ಎಸ್ ಪಿ ವಿಕ್ರಂ ಆಮ್ಟೆ ವಿಶೇಷ ತಂಡ ರಚಿಸಿದ್ದರು.
ಚಿಕ್ಕಮಗಳೂರು ಸಿಇಎನ್ ಠಾಣೆ ಪೊಲೀಸರು ಹಾಗೂ ಡಿವೈಎಸ್ ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ವಂಚನೆ ಮಾಡುತ್ತಿರುವ ಬಗ್ಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ನಿರಂತರ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಉಪವ್ಯವಸ್ಥಾಪಕ ರಾಘವೇಂದ್ರ ಅವರು ಕಳಸ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.