Belagavi NewsBelgaum NewsKarnataka NewsLatestPolitics

*ವಿಶೇಷ ಚೇತನ ಮಕ್ಕಳಿಗೆ 70 ಸಾಧನ ಸಲಕರಣೆಗಳ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ವಿಶೇಷ ಚೇತನ ಮಕ್ಕಳ ಶಿಕ್ಷಣ ಹಾಗೂ ದೈನಂದಿನ ಜೀವನವನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ಸರ್ಕಾರದ ವತಿಯಿಂದ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆ.ಎಚ್. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗಾವಿ ಗ್ರಾಮೀಣ ಭಾಗದ 2025-26ನೇ ಸಾಲಿನ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಉದ್ಘಾಟಿಸಿದರು.

Home add -Advt

ಬೆಳಗಾವಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಶಾಲೆಗಳಿಗೆ ಸೇರಿದ ಒಟ್ಟು 44 ವಿಶೇಷ ಚೇತನ ಮಕ್ಕಳಿಗೆ 70 ಸಾಧನ ಸಲಕರಣೆಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಮಕ್ಕಳ ಅಗತ್ಯಕ್ಕೆ ಅನುಗುಣವಾಗಿ ಒದಗಿಸಲಾದ ಈ ಸಾಧನಗಳು ಅವರ ಶೈಕ್ಷಣಿಕ ಚಟುವಟಿಕೆಗಳು, ಶಾಲಾ ಸಂಚಾರ ಹಾಗೂ ದೈನಂದಿನ ಜೀವನದಲ್ಲಿ ಆತ್ಮವಿಶ್ವಾಸದಿಂದ ಮುಂದುವರಿಯಲು ಸಹಕಾರಿಯಾಗಲಿವೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಮೃಣಾಲ್‌ ಹೆಬ್ಬಾಳಕರ್, ವಿಶೇಷ ಚೇತನ ಮಕ್ಕಳಿಗೆ ಅನುಕೂಲಕರವಾದ ಶೈಕ್ಷಣಿಕ ವಾತಾವರಣ ನಿರ್ಮಿಸುವುದು ಸಮಾಜದ ಎಲ್ಲರ ಜವಾಬ್ದಾರಿಯಾಗಿದೆ. ಮಕ್ಕಳಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿ ಅವರಿಗೆ ಅಗತ್ಯವಾದ ನೆರವು ಹಾಗೂ ಪ್ರೋತ್ಸಾಹ ನೀಡಿದಾಗ ಅವರು ಕೂಡ ಇತರ ಮಕ್ಕಳಂತೆ ಶಿಕ್ಷಣ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸರ್ಕಾರವು ವಿಶೇಷ ಚೇತನ ಮಕ್ಕಳ ಶಿಕ್ಷಣ ಹಾಗೂ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಅಗತ್ಯವಿರುವ ಸಾಧನ ಸಲಕರಣೆಗಳನ್ನು ಒದಗಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವಾಗುತ್ತಿದೆ. ಇಂತಹ ಸೌಲಭ್ಯಗಳನ್ನು ಅರ್ಹ ಮಕ್ಕಳಿಗೆ ತಲುಪಿಸುವಲ್ಲಿ ಶಿಕ್ಷಕರು, ಅಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರ ಪಾತ್ರವೂ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಮಕ್ಕಳಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಮೂಲಕ ಅವರ ಮುಖದಲ್ಲಿ ಮೂಡಿದ ಸಂತಸ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಪೋಷಕರು ಹಾಗೂ ಸ್ಥಳೀಯರು ಸರ್ಕಾರದ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪುಂಡಲೀಕ್ ಎಸ್. ಚವ್ಹಾಣ, ಎಸ್‌ಡಿಎಂಸಿ ಅಧ್ಯಕ್ಷ ವಿಕ್ರಂ ಮುತಗೇಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಪಾಲ್ ನಾಯಕ, ಗ್ರಾಮ ಲೆಕ್ಕಾಧಿಕಾರಿ ಅನ್ವಿತಾ ಪಾಟೀಲ, ಗ್ರಾಮೀಣ ವಲಯದ ಸಮನ್ವಯಾಧಿಕಾರಿ ಡಾ. ದಾನಮ್ಮ ಝಳಕಿ, ಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕೋಲಕಾರ, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ಗ್ರಾಮದ ಹಿರಿಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Back to top button