
ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿ ಚಾಲನೆ ದೊರೆಯಲಿದೆ. ನಟ ಹಾಗೂ ನಿರ್ದೇಶಕ ವಿ. ರವಿಚಂದ್ರನ್ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣದಲ್ಲಿ ನಾಡಹಬ್ಬದ ಸಂಭ್ರಮ ಮನೆ ಮಾಡಲಿದೆ. ಬನ್ನಿ ಪೂಜೆ, ಜಂಬೂಸವಾರಿ, ಅಂಬಾರಿ ಹೊತ್ತು ಸಾಗಲಿರುವ ಮಹೇಂದ್ರ ಆನೆ ಹಾಗೂ ವಿವಿಧ ಕಲಾತಂಡಗಳ ಪ್ರದರ್ಶನ ಈ ಬಾರಿಯ ಉತ್ಸವದ ಪ್ರಮುಖ ಆಕರ್ಷಣೆಗಳಾಗಿವೆ.
ಮಧ್ಯಾಹ್ನ 3ರಿಂದ 3.45ರ ನಡುವಿನ ಶುಭ ಕುಂಭ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಬನ್ನಿ ಪೂಜೆಯೊಂದಿಗೆ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆ ಆರಂಭವಾಗಲಿದೆ. ಮಹೇಂದ್ರ ಆನೆ ಅಂಬಾರಿ ಹೊತ್ತು ಸಾಗಲಿದ್ದು, ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಂಬೂಸವಾರಿ ವಿಜೃಂಭಣೆಯಿಂದ ನಡೆಯಲಿದೆ.
ಕಿರಂಗೂರು ಬಳಿಯ ಬನ್ನಿಮಂಟಪದಿಂದ ಆರಂಭವಾಗುವ ಮೆರವಣಿಗೆ ಶ್ರೀರಂಗನಾಥಸ್ವಾಮಿ ದೇವಾಲಯದವರೆಗೆ ಸಾಗಲಿದೆ. ಮೆರವಣಿಗೆಯಲ್ಲಿ ನಾಡಿನ ವೈವಿಧ್ಯಮಯ ಕಲಾಪ್ರಕಾರಗಳನ್ನು ಪ್ರದರ್ಶಿಸುವ ಹಲವು ಕಲಾತಂಡಗಳು ಭಾಗವಹಿಸಲಿವೆ. ಸಾಂಪ್ರದಾಯಿಕ ವಾದ್ಯಗಳು, ನೃತ್ಯಗಳು ಹಾಗೂ ಸ್ತಬ್ಧಚಿತ್ರಗಳು ಉತ್ಸವದ ಮೆರುಗನ್ನು ಹೆಚ್ಚಿಸಲಿವೆ.
ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ ಹಾಗೂ ಕೊಂಬು-ಕಹಳೆ ಸೇರಿದಂತೆ ಹಲವು ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಸ್ತಬ್ಧಚಿತ್ರಗಳ ಮೆರವಣಿಗೆಯೂ ನಡೆಯಲಿದ್ದು, ಶ್ರೀರಂಗಪಟ್ಟಣದ ಬೀದಿಗಳಲ್ಲಿ ಸಾಂಸ್ಕೃತಿಕ ವೈಭವ ಅನಾವರಣಗೊಳ್ಳಲಿದೆ.
ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದ್ದು, ಶ್ರೀರಂಗನಾಥಸ್ವಾಮಿ ದೇವಾಲಯದ ಸಮೀಪ ನಿರ್ಮಿಸಿರುವ ವೇದಿಕೆಯಲ್ಲಿ ವಿವಿಧ ಕಲಾ ಪ್ರದರ್ಶನಗಳು ನಡೆಯಲಿವೆ.
ಐತಿಹಾಸಿಕ ಪರಂಪರೆ, ಧಾರ್ಮಿಕ ಆಚರಣೆ ಹಾಗೂ ಜನಪದ ಕಲೆಯ ಸಮ್ಮಿಲನವಾಗಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ಜನರು ಎದುರು ನೋಡುತ್ತಿದ್ದಾರೆ. ಮುಂದಿನ ನಾಲ್ಕು ದಿನಗಳ ಕಾಲ ಪಟ್ಟಣದಲ್ಲಿ ದಸರಾ ಸಂಭ್ರಮ ಕಳೆಗಟ್ಟಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



