ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸುವ ಕುರಿತು ಇಂದು ಮಹತ್ವದ ಸಭೆ ನಡೆಯಲಿದೆ.
ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕುರಿತು ಚರ್ಚಿಸಲಿದ್ದಾರೆ.
ಕಾಲೇಜುಗಳನ್ನು ಆರಂಭಿಸಿದರೆ ಆಗಬಹುದಾದ ಸಾಧಕ, ಬಾಧಕಗಳ ಕುರಿತು ಚರ್ಚೆ ನಡೆಯಲಿದೆ.
ಮೊದಲ ಹಂತದಲ್ಲಿ ಕಾಲೇಜುಗಳನ್ನು ಆರಂಭಿಸಿ, ನಂತರದಲ್ಲಿ ಹೈಸ್ಕೂಲ್ ಮತ್ತು ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಸರಕಾರ ಚಿಂತನೆ ನಡೆಸಿದೆ. ಆದರೆ ತರಾತುರಿಯಲ್ಲಿ ಕಾಲೇಜು ಆರಂಭಿಸಿ ನಂತರ ಎಡವಟ್ಟಾಗಬಾರದೆನ್ನುವ ಕಾರಣಕ್ಕೆ ತಜ್ಞರು ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ಅಲ್ಲಿ ಬರುವ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ನವೆಂಬರ್ 2ನೇ ವಾರದ ಹೊತ್ತಿಗೆ ಕಾಲೇಜುಗಳನ್ನು ಆರಂಭಿಸಲು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಇದೇ ವೇಳೆ ಶಾಲೆಗಳನ್ನು ಆರಂಭಿಸುವ ಕುರಿತು ಮುಂದಿನ ವಾರ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಸಭೆ ನಡೆಸಲಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಶಾಲೆಗಳನ್ನು ಆರಂಭಿಸುವ ಚಿಂತನೆ ಸರಕಾರದ ಮುಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ