Belagavi NewsBelgaum NewsEducationKannada NewsKarnataka News

*ಸರ್ಕಾರಿ ಕನ್ನಡ ಶಾಲೆಗಳ ಮುಚ್ಚುವಿಕೆ ಬಗ್ಗೆ ಅಧಿವೇಶನದಲ್ಲಿ ಸ್ಪಷ್ಟ ನಿಲುವು ಪ್ರಕಟಿಸಿ*: *ಕನ್ನಡ ಸಂಘಟನೆಗಳ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿನ ಸರ್ಕಾರಿ ಕನ್ನಡ ಶಾಲೆಗಳನ್ನು ಮುಚ್ಚುವ ಹಾಗೂ ಮ್ಯಾಗ್ನೆಟ್ ಶಾಲೆಗಳಲ್ಲಿ ವಿಲೀನಗೊಳಿಸುವ ವಿಚಾರವಾಗಿ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರು ಗೊಂದಲಮಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ತನ್ನ ಸ್ಪಷ್ಟ ನಿಲುವನ್ನು ಪ್ರಕಟಿಸಬೇಕು ಎಂದು ಕನ್ನಡ ಸಂಘಟನೆಗಳ ಸಭೆ ಆಗ್ರಹಿಸಿದೆ.

ರವಿವಾರ ಸಂಜೆ ನಾಗನೂರು ಶ್ರೀ ರುದ್ರಾಕ್ಷಿ ಮಠದಲ್ಲಿ ಶ್ರೀ ಅಲ್ಲಮಪ್ರಭು ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಕನ್ನಡ ಸಂಘಟನೆಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಸರ್ಕಾರಿ ಶಾಲೆಗಳನ್ನು ಮುಚ್ಚುವುದರಿಂದ ಮೊದಲನೆಯದಾಗಿ ಬಡವರು, ಕಾರ್ಮಿಕರು ಹಾಗೂ ಶೋಷಿತ ವರ್ಗಗಳ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಹಿಸುವ ಸರ್ಕಾರದ ಕ್ರಮ ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದ್ದು, ಇದು ಬಡವರು ಮತ್ತು ಸಾಮಾನ್ಯ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ. ಇಂತಹ ಜನವಿರೋಧಿ ನಿರ್ಧಾರಗಳಿಂದ ಸರ್ಕಾರ ದೂರ ಸರಿಯಬೇಕು ಎಂದು ಸಭೆ ಒತ್ತಾಯಿಸಿತು.

ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ಎಲ್ಲ ಪಕ್ಷಗಳ ಶಾಸಕರು ಅಧಿವೇಶನದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಖಾಸಗಿ ಗೊತ್ತುವಳಿ ಮಂಡಿಸುವ ಮೂಲಕ ಸರ್ಕಾರಿ ಶಾಲೆಗಳ ರಕ್ಷಣೆಗೆ ಸದನದಲ್ಲಿಯೇ ಸರ್ಕಾರದಿಂದ ಸ್ಪಷ್ಟ ಭರವಸೆ ಪಡೆಯಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಇದರೊಂದಿಗೆ ಸರ್ಕಾರಿ ಶಾಲೆಗಳಷ್ಟೇ ಅಲ್ಲದೆ, ಅನುದಾನಿತ ಶಾಲೆಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳನ್ನೂ ಸರ್ಕಾರದ ಗಮನಕ್ಕೆ ತರಲು ತೀರ್ಮಾನಿಸಲಾಯಿತು. 1999ರಲ್ಲಿ ಚಂದರಗಿ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಶಿಫಾರಸಿನಂತೆ ಸರ್ಕಾರಿ ಶಾಲೆಗಳ ಸಂರಕ್ಷಣೆಯ ಹೊಣೆಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸಲು ಸಭೆ ನಿರ್ಧರಿಸಿತು.

ನಾಗನೂರು ರುದ್ರಾಕ್ಷಿ ಮಠ ಹಾಗೂ ಸಮಾನ ಮನಸ್ಕ ಕನ್ನಡ ಸಂಘಟನೆಗಳ ಜಂಟಿ ಮನವಿ ಪತ್ರ ಸಿದ್ಧಪಡಿಸಿ ಶಾಸಕರಿಗೆ ತಲುಪಿಸಲು ತೀರ್ಮಾನಿಸಲಾಯಿತು. ಅಲ್ಲದೆ, ಗಡಿಭಾಗದ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳ ಭೇಟಿಗೆ ಸಮಯ ನಿಗದಿಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ ಅವರಿಗೆ ಮನವಿ ಸಲ್ಲಿಸಲು ನಿರ್ಣಯಿಸಲಾಯಿತು.

ಸಭೆಯಲ್ಲಿ ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ, ಮಹಾದೇವ ತಳವಾರ, ಬಲರಾಮ ಮಾಸೇನಟ್ಟಿ, ಮಹೇಶ ಶೀಗಿಹಳ್ಳಿ, ಶಿವಾನಂದ ಸಮ್ಮಕನವರ, ವಂದನಾ ಹೊರಕೇರಿ, ಸ್ಮಿತಾ ಪೂಜಾರ, ಗೀತಾ ಜಿನಬಸಪ್ಪನವರ, ಆನಂದ ಬಿಲಾವರ, ರೇಖಾ ಲಕ್ಕುಂಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Related Articles

Back to top button