Latest

*ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಹೊಸ ತಿರುವು*: *ಹೆಚ್‌ಡಿಕೆ ನಿವಾಸದಲ್ಲಿ ಸ್ಥಳ ಮಹಜರಿಗೆ ಸಿಸಿಬಿ ಸಿದ್ಧತೆ?*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಹೇಳಿಕೆ ಬೆನ್ನಲ್ಲೇ ತನಿಖೆಯ ಹಾದಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರತ್ತ ತಿರುಗಿದೆ. ಸ್ಟಿಂಗ್ ವಿಡಿಯೋ ಹಂಚಿಕೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಸ್ಟಿಂಗ್ ವಿಡಿಯೋ ಹಂಚಿಕೆ ಪ್ರಕರಣದ ಆರೋಪಿಗಳಾದ ಪ್ರಜ್ವಲ್ ಪ್ರಸಾದ್ ಮತ್ತು ರಿತೇಶ್ ಪಾಂಡೆ ನಡುವೆ ಹಣಕಾಸಿನ ವಹಿವಾಟು ನಡೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕುಮಾರಸ್ವಾಮಿ ಅವರ ಸಾಮಾಜಿಕ ಜಾಲತಾಣ ತಂಡದ ಸದಸ್ಯ ಪ್ರಜ್ವಲ್ ಪ್ರಸಾದ್ ಸೂಚನೆಯಂತೆ ರಿತೇಶ್ ಪಾಂಡೆ ಮತ್ತು ಆತನ ಸಹಚರ ವಿನೋದ್ ಶರ್ಮಾ ದೆಹಲಿಯ ಕರೋಲ್ ಬಾಗ್‌ನ ಅಂಗಡಿಯೊಂದರಲ್ಲಿ ಮೊಬೈಲ್ ಖರೀದಿಸಿದ್ದಾರೆ. ಈ ದೃಶ್ಯಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ತಿಳಿಸಿದ್ದರು.

ಖರೀದಿಸಿದ ಮೊಬೈಲ್ ಅನ್ನು ದೆಹಲಿಯಲ್ಲಿರುವ ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಲ್ಲಿ ಪ್ರಜ್ವಲ್ ಪ್ರಸಾದ್‌ಗೆ ಹಸ್ತಾಂತರಿಸಲಾಗಿದೆ. ರಿತೇಶ್ ಪಾಂಡೆ ಮತ್ತು ಪ್ರಜ್ವಲ್ ಪ್ರಸಾದ್ ಇಬ್ಬರೂ ಕುಮಾರಸ್ವಾಮಿ ಅವರ ನಿವಾಸದಲ್ಲಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಆಯುಕ್ತರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಯ ನಿವಾಸದಲ್ಲಿ ಸ್ಥಳ ಮಹಜರು ನಡೆಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ

ಈ ಹಿಂದೆ ತಮ್ಮ ವಿರುದ್ಧವೇ ತನಿಖೆ ತಿರುಗಲಿದೆ ಎಂದು ಕುಮಾರಸ್ವಾಮಿ ಹೇಳಿದ್ದರು. ಇದೀಗ ತನಿಖೆಯಲ್ಲಿ ತಮ್ಮ ಹೆಸರು ಪ್ರಸ್ತಾಪವಾಗಿರುವ ಬೆನ್ನಲ್ಲೇ ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಉದ್ದೇಶಪೂರ್ವಕವಾಗಿ ಕುಮಾರಸ್ವಾಮಿ ಅವರನ್ನು ಗುರಿಯಾಗಿಸುತ್ತಿದೆ ಎಂಬುದು ಜೆಡಿಎಸ್ ನಾಯಕರ ವಾದ.

ಪೊಲೀಸ್ ಆಯುಕ್ತರು ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪಗಳಿಗೆ ತಿರುಗೇಟು ನೀಡಲು ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಜೆ.ಪಿ. ಭವನದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ತನಿಖೆಯ ದಿಕ್ಕು ಬದಲಾವಣೆಯಾಗಿದೆ ಎಂಬ ಆರೋಪ ಹಾಗೂ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಕಟ್ಟಿಹಾಕಲು ನಡೆಯುತ್ತಿರುವ ಬೆಳವಣಿಗೆಗಳ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ದೀಪಾವಳಿ ಹೊಸ್ತಿಲಲ್ಲೇ ಸ್ಟಿಂಗ್ ಆಪರೇಷನ್ ಪ್ರಕರಣ ಮತ್ತಷ್ಟು ಕಾವು ಪಡೆದುಕೊಂಡಿದೆ. ತನಿಖೆಯ ಮುಂದಿನ ಹಂತದಲ್ಲಿ ಇನ್ನಷ್ಟು ನಾಯಕರ ಹೆಸರುಗಳು ಮುನ್ನೆಲೆಗೆ ಬರಲಿವೆಯೇ ಎಂಬ ಕುತೂಹಲ ಹೆಚ್ಚಾಗಿದೆ. ಈ ಪ್ರಕರಣದಲ್ಲಿ ಬಿಜೆಪಿ ತನ್ನ ಮೈತ್ರಿ ಪಾಲುದಾರ ಜೆಡಿಎಸ್‌ಗೆ ಬೆಂಬಲವಾಗಿ ನಿಲ್ಲಲಿದೆಯೇ ಅಥವಾ ಅಂತರ ಕಾಯ್ದುಕೊಳ್ಳಲಿದೆಯೇ ಎಂಬ ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Related Articles

Back to top button