*ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ : ಉದ್ವಿಗ್ನ ಪರಿಸ್ಥಿತಿ ನಿರ್ಮಾಣ*
ಪ್ರಗತಿವಾಹಿನಿ ಸುದ್ದಿ, : ದಾವಣಗೆರೆ ವೆಂಕಾ ಭೋವಿ ಕಾಲೋನಿಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಹಲವಾರು ಮನೆಗಳು ಮತ್ತು ವಾಹನಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.
ಗಣೇಶ ಮೂರ್ತಿ ಮೆರವಣಿಗೆ ವೇಲೆ ಅನ್ಯ ಧರ್ಮದ ಯುವಕನೊಬ್ಬ ಬಹಿರಂಗವಾಗಿ ಸವಾಲು ಹಾಕಿದ್ದು, ಆಕ್ಷೇಪಾರ್ಹ ಭಾಷೆ ಬಳಸಿ, ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಹಿಂದೂ ಸಂಘಟನೆಗಳು ಜಗಳೂರು ರಸ್ತೆಯ ವೆಂಕಟೇಶ್ವರ ವೃತ್ತದಲ್ಲಿ ಜಮಾಯಿಸಿದ್ದಾರೆ. ಡಿಜೆ ಸೆಟ್‌ನೊಂದಿಗೆ ಅರಳಿಮರದ ವೃತ್ತದ ಬಳಿಕ ಮೆರವಣಿಗೆ ಆಗಮಿಸುತ್ತಿದ್ದಂತೆ ಘರ್ಷಣೆ ಶುರುವಾಗಿದೆ. ಕೆಲವರು ಕಲ್ಲು ತೂರಾಟ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಘಟನೆ ಬಗ್ಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು, ಯುವಕನೊಬ್ಬ ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಲ್ಲು ತೂರಾಟ ನಡೆದಿದೆ. ಗಣೇಶ ಮೂರ್ತಿಯನ್ನು ಸುರಕ್ಷಿತವಾಗಿ ನಿಮಜ್ಜನ ಮಾಡಲಾಗಿದೆ. ಸ್ಥಳದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದ್ದು, ನಿಷೇಧಾಜ್ಞೆಗೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ