*ಜಾತ್ರೆ ಮೆರವಣಿಗೆಯಲ್ಲಿ ಕಲ್ಲು ತೂರಾಟ*: *ಮಗು ಸೇರಿ ನಾಲ್ವರಿಗೆ ಗಾಯ- ರಥೋತ್ಸವ ಅರ್ಧಕ್ಕೆ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ದೇವರ ಜಾತ್ರೆಯ ಸಂಭ್ರಮದ ನಡುವೆ ಏಕಾಏಕಿ ಗಲಾಟೆ ಭುಗಿಲೆದ್ದಿದೆ. ಪಟಾಕಿ ಸಿಡಿಸುವ ವಿಚಾರಕ್ಕೆ ಆರಂಭವಾದ ವಾಗ್ವಾದ ಎರಡು ಗುಂಪುಗಳ ನಡುವಿನ ಘರ್ಷಣೆಗೆ ತಿರುಗಿದೆ. ಕಲ್ಲು ತೂರಾಟದಿಂದ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮಿ ಜಾತ್ರೆಯ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಗಾಯಾಳುಗಳಾದ ಆನಂದ್, ಭರತ್, ಅಭಿ ಹಾಗೂ ಮಗುವಿಗೆ ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಾತ್ರೆಯ ಸಂದರ್ಭದಲ್ಲಿ ಪಟಾಕಿ ಸಿಡಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ಘಟನೆಯಿಂದ ಮೆರವಣಿಗೆಯ ಸಂಭ್ರಮ ಕ್ಷಣಾರ್ಧದಲ್ಲಿ ಆತಂಕಕ್ಕೆ ತಿರುಗಿದೆ.
ಘರ್ಷಣೆಯ ಹಿನ್ನೆಲೆಯಲ್ಲಿ ಬೆಟ್ಟದಿಂದ ಆಗಮಿಸುತ್ತಿದ್ದ ಸಿದ್ದೇಶ್ವರ ಸ್ವಾಮಿ ರಥೋತ್ಸವವನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಗಿದೆ. ಮೆರವಣಿಗೆ ವೇಳೆ ಸೂಕ್ತ ಪೊಲೀಸ್ ಭದ್ರತೆ ಇರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ತಹಶೀಲ್ದಾರ್ ಆಗಮಿಸಬೇಕು ಹಾಗೂ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ.



