Belagavi NewsBelgaum NewsKannada NewsKarnataka NewsNational

*ರಾಜ್ಯದಲ್ಲಿ 2 ದಿನ ಮಳೆ ಜೊತೆಗೆ ಬೀಸಲಿದೆ ವೇಗದ ಗಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 15 ಮತ್ತು 16ರಂದು ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆಯ ಚಟುವಟಿಕೆಗಳು ಮುಂದುವರಿಯಲಿದ್ದು, ಇದರೊಂದಿಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. 

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನಗಳ ಕಾಲ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಲೆನಾಡು ಭಾಗದ ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಬೀಳುವ ಮುನ್ಸೂಚನೆ ಇದೆ. 

ಇನ್ನು ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ಮೈಸೂರು, ಮಂಡ್ಯ ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆ ಇರಲಿದ್ದು, ಗಾಳಿಯ ವೇಗ ಮಾತ್ರ ಹೆಚ್ಚಲಿದೆ.

ಅದೇ ರೀತಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಸಹ ಭಾರಿ ಗಾಳಿಯ ಮುನ್ಸೂಚನೆ ನೀಡಲಾಗಿದೆ. ಈ ಪೈಕಿ ಜುಲೈ 16ರಂದು ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರವಾದ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button