*ಭಾರಿ ಮಳೆ: 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ 16 ಜಿಲ್ಲೆಗಳಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ, ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಂದು ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗಿದೆ. ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರ ಬಂದ್ ಆಗಿದೆ.
ವರುಣಾರ್ಭಟ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಕೂಡ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ನದಿ, ಹಳ್ಳಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ.
ಬೆಳಗಾವಿ, ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಕೋಲಾರ, ಚಾಮರಾಜನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕಲಬುರ್ಗಿ, ಧಾರವಾಡ, ವಿಜಯಪುರ, ರಾಯಚೂರು, ಯಾದಗಿರಿ, ವಿಜಯನಗರ, ಧಾರವಾಡ, ಬೀದರ್, ಕೊಪ್ಪಳ, ಗದಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಒಟ್ಟಾರೆ ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.




