
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ರಣ ಬಿಸಿಲು ಆರಂಭವಾಗಿದೆ. ಬಿಸಿಲ ಝಳಕ್ಕೆ ಜನರು ಬಸವಳಿದು ಹೋಗುತ್ತಿದ್ದಾರೆ. ಈ ನಡುವೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯಿಂದ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಾರ್ಚ್ 7ರಂದು ಬೆಂಗಳೂರಿನಲ್ಲಿ ಈ ವರ್ಷದಲ್ಲಿ ಅತ್ಯಂತ ಗರಿಷ್ಠ ತಾಪಮಾನ ದಾಖಲಾಗಿದೆ. ಅತಿಯಾದ ತಾಪಮಾನ ಕಾರಣ ಮುಂಗಾರುಪೂರ್ವ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದಾರೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇತರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.