ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಸಚಿವರಾದ ಶಶಿಕಲಾ ಜೊಲ್ಲೆ, ಉಮೇಶ ಕತ್ತಿ, ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ, ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತು ಜಿಲ್ಲೆಯ ಸಂಸದರು, ಶಾಸಕರೊಂದಿಗೆ ಆಗಮಿಸಿದ ಮಹಾಂತೇಶ ಕವಟಗಿಮಠ ತಮ್ಮ ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರೂ ಆಗಮಿಸಿದ್ದರು.
ಈ ವೇಳೆ ಮಾತನಾಡಿದ ರಮೇಶ ಜಾರಕಿಹೊಳಿ, ಇದೇ ತಿಂಗಳು 29ರಂದು ನವದೆಹಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತೇನೆ. ಕಾಂಗ್ರೆಸ್ ಸೋಲಿಸಲು ಬಿಜೆಪಿ ಅಭ್ಯರ್ಥಿಯ ಜೊತೆಗೆ ಯಾರನ್ನು ಬೆಂಬಲಿಸಬೇಕೆನ್ನುವುದನ್ನು ಮನವರಿಕೆ ಮಾಡಲಿದ್ದೇನೆ. ಅವರ ಒಪ್ಪಿಗೆ ಪಡೆದು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ನಂತರ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್ತಿನ ಹಾಲಿ ಸದಸ್ಯ ವಿವೇಕರಾವ್ ಪಾಟೀಲ, ಅಂಬಿರಾವ್ ಪಾಟೀಲ ಮೊದಲಾದವರು ಆಗಮಿಸಿದ್ದರು.
ಈ ವೇಳೆ ಮಾತನಾಡಿದ ಲಖನ್ ಜಾರಕಿಹೊಳಿ, ನಾನು ಬಿಜೆಪಿ ಬಂಡಾಯ ಅಭ್ಯರ್ಥಿಯಲ್ಲ. ಬಿಜೆಪಿ ಟಿಕೆಟ್ ಕೇಳಿರಲಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.
ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ